ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಹಲ್ಲೆ: ಪೊಲೀಸ್ ಅಧಿಕಾರಿ ಅಮಾನತಿಗೆ ಸಿದ್ದರಾಮಯ್ಯ ಆಗ್ರಹ

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಟೀ ಶರ್ಟ್ ಧರಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಟೀ ಶರ್ಟ್ ಧರಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸುತ್ತಿರುವ ವಿಡಿಯೋ ಟ್ವೀಟ್‌ ಮಾಡಿರುವ ಮಾಜಿ ಸಿಎಂ, ‘ಪೇಸಿಎಂ ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಬೀದಿ ಗೂಂಡಾ ರೀತಿ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ. ಈ‌ ಪುಂಡ ಪೋಲಿಸನನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ’ ಎಂದಿದ್ದಾರೆ.

ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್. ಕರ್ನಾಟಕದಲ್ಲಿ ಯುಪಿ ಮಾದರಿ ಆಡಳಿತ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಪೊಲೀಸರು ಅದನ್ನು ಅನುಷ್ಠಾನಗೊಳಿಸಲು ಹೊರಟಂತಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

40 ಪರ್ಸೆಂಟ್‌ ಕಮಿಷನ್ ಭ್ರಷ್ಟಾಚಾರದ ವಿರುದ್ಧದ ನಮ್ಮ ಪಕ್ಷದ ಅಭಿಯಾನವನ್ನು ಎದುರಿಸುವ ಧಮ್ಮು-ತಾಕತ್ ಬಿಜೆಪಿ ಪಕ್ಷಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದೆ ಬಿಜೆಪಿ ಪೊಲೀಸರ ಮೂಲಕ ದಮನಿಸುವ ಹೇಡಿತನಕ್ಕೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರದ ವಿರುದ್ಧದ ಅಭಿಯಾನ ಅಪರಾಧ ಎಂದು ಯಾವ ಕಾನೂನಿನಲ್ಲಿ ಹೇಳಿದೆ? ಮುಖ್ಯಮಂತ್ರಿ ಅವರೇ, ನಮ್ಮ ವಿರುದ್ಧ ಕೊಳಕು ಭಾಷೆಯ ಜಾಹೀರಾತು ನೀಡಿದ್ದೀರಿ, ಅದನ್ನು ನಾವು ಹರಿದುಹಾಕಲು ಹೋಗುವುದಿಲ್ಲ. ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com