ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ: ಸಿದ್ದರಾಮಯ್ಯ

ಪರೇಶ್‌ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಪರೇಶ್‌ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ‌ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು' ಎಂದಿದ್ದಾರೆ.

'ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ' ಎಂದಿದ್ದಾರೆ.

ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು, ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ನಾಲ್ಕು ವರ್ಷಕ್ಕೂ ಅಧಿಕ ಕಾಲ ತನಿಖೆ ನಡೆಸಿದ ಸಿ.ಬಿ.ಐ ಅಧಿಕಾರಿಗಳು, ಸುಮಾರು 1,500 ಪುಟಗಳ ವರದಿಯನ್ನು ಹೊನ್ನಾವರದ ನ್ಯಾಯಾಲಯಕ್ಕೆ ಭಾನುವಾರ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯವು ಸೋಮವಾರ ಸ್ವೀಕೃತಗೊಳಿಸಿದೆ. ಮುಂದಿನ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದೆ.

ಸಂಘಪರಿವಾರದ ಕಾರ್ಯಕರ್ತ' ಎಂದು ಬಿಂಬಿತವಾಗಿ ರಾಜ್ಯಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ್ ಮೇಸ್ತಾ ಸಾವು ಪ್ರಕರಣವು ತಿರುವು ಪಡೆದುಕೊಂಡಿದೆ. 'ಪರೇಶ್ ಮೇಸ್ತಾ ಸಾವು ಆಕಸ್ಮಿಕ' ಎಂದು ಹೇಳಿ ಸಿಬಿಐ ನ್ಯಾಯಾಲಕ್ಕೆ ವರದಿ ಸಲ್ಲಿಸಿದೆ.  ಹೊನ್ನಾವರದ ಕೋರ್ಟ್‌ಗೆ ವರದಿ ಸಲ್ಲಿಸಿರುವ ಸಿಬಿಐ ತನಿಖಾ ತಂಡ, 'ಪರೇಶ್ ಮೇಸ್ತಾ ಸಾವು ಆಕಸ್ಮಿಕವಾಗಿದ್ದು, ಇದು ಕೋಮು ಹತ್ಯೆ ಅಲ್ಲ" ಎಂದು ತಿಳಿಸಿದೆ.

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಆ ಬಳಿಕ ಡಿಸೆಂಬರ್ 8ರಂದು ಹೊನ್ನಾವರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದನು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com