ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ನೀಲ ನಕ್ಷೆ ಸಿದ್ದಪಡಿಸಿ: ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಬೇಕಾದ ನೀಲ ನಕ್ಷೆಯನ್ನು ಏಪ್ರಿಲ್ 16 ರೊಳಗೆ ಸಿದ್ಧಪಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಬಿಜೆಪಿ ನಾಯಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
Published: 01st April 2022 10:55 PM | Last Updated: 04th April 2022 01:07 PM | A+A A-

ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಬೇಕಾದ ನೀಲ ನಕ್ಷೆಯನ್ನು ಏಪ್ರಿಲ್ 16 ರೊಳಗೆ ಸಿದ್ಧಪಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಬಿಜೆಪಿ ನಾಯಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಶುಕ್ರವಾರ ಅಮಿತ್ ಶಾ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಕಾರ್ಯತಂತ್ರ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಹಾಲಿ ಇರುವ 120 ಶಾಸಕರ ಸಂಖ್ಯೆಯನ್ನು ಮುಂದಿನ ಚುನಾವಣೆಯಲ್ಲಿ 150 ಕ್ಕೆ ಹೆಚ್ಚಿಸಲು ಬೇಕಾದ ನೀಲ ನಕ್ಷೆಯನ್ನು ಸಿದ್ಧಪಡಿಸಿ ಏಪ್ರಿಲ್ 16ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಕೈಗೆ ನೀಡುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ದೇಶದಲ್ಲಿ ಹಾಲು ಉತ್ಪಾದಕರಿಗೆ ಪ್ರತ್ಯೇಕ ಬ್ಯಾಂಕ್ ಸ್ಥಾಪನೆ, ಕ್ರೆಡಿಟ್ ಕಾರ್ಡ್ ನೀಡಲು ಯೋಜನೆ- ಅಮಿತ್ ಶಾ
ಈ ಹಿಂದೆ ಎರಡು ಬಾರಿ ಆದಂತೆ ಬಿಜೆಪಿಗೆ ಬಹುಮತದ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಟಾರ್ಗೆಟ್ 150 ಎಂದು ಕೇವಲ ಬಾಯಿ ಮಾತಲ್ಲೆ ಹೇಳಿದರೆ ಸಾಲದು. ಅಷ್ಟು ಶಾಸಕರನ್ನು ಗೆಲ್ಲಿಸಿಕೊಂಡು ಬರಲು ಎಲ್ಲ ನಾಯಕರಿಗೂ ಜವಾಬ್ದಾರಿ ಹಂಚಿಕೆ ಮಾಡಬೇಕು. ಹಳೇ ಮೈಸೂರು ಭಾಗ, ಉತ್ತರ ಕರ್ನಾಟಕ, ಕರಾವಳಿ, ಮಧ್ಯ ಕರ್ನಾಟಕ ಭಾಗಗಳಲ್ಲಿ ನೂನ್ಯತೆಗಳನ್ನು ಪತ್ತೆ ಹಚ್ಚಿ ಪಕ್ಷವನ್ನು ಬಲಗೊಳಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಈಗಿನಿಂದಲೇ ಕಾರ್ಯತಂತ್ರ ರೂಪಿಸಬೇಕು, ಬಿಜೆಪಿ ಶಾಸಕರು ಇಲ್ಲದಿರುವ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕು. ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳಿಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಬಿಜೆಪಿಗೆ ಬರುವವರನನ್ನು ಸೇರಿಸಿಕೊಳ್ಳುವಂತೆ ಅಮಿತ್ ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ರಾಜ್ಯ ಕೋರ್ ಕಮಿಟಿ ಸಭೆ ಮಾನ್ಯ ಕೇಂದ್ರ ಗೃಹ ಸಚಿವರಾದ ಶ್ರೀ @AmitShah ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.
— Nalinkumar Kateel (@nalinkateel) April 1, 2022
ಮುಂದಿನ ವಿಧಾನಸಭಾ ಚುನಾವಣೆಯ ಬಗ್ಗೆ ಶ್ರೀ ಅಮಿತ್ ಶಾ ಅವರು ಸೂಚನೆ, ಮಾರ್ಗದರ್ಶನ ನೀಡಿದ್ದಾರೆ. ಕನಿಷ್ಟ 150 ಸೀಟುಗಳನ್ನು ಪಕ್ಷ ಗೆಲ್ಲಲಿದೆ.#KarnatakaWelcomesAmitShah pic.twitter.com/vAGJvRViPG
ಅವಧಿ ಪೂರ್ವ ಚುನಾವಣೆ ಇಲ್ಲ: ಪಂಚ ರಾಜ್ಯಗಳ ಚುನಾವಣೆ ಗೆಲುವಿನಿಂದ ಬೀಗುತ್ತಿರುವ ಬಿಜೆಪಿ, ಡಿಸೆಂಬರ್ ನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದೇ ವೇಳೆ ಕರ್ನಾಟಕ ವಿಧಾನಸಭೆಗೂ ಚುನಾವಣೆ ನಡೆಸಲು ಚಿಂತನೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ, ಅವಧಿ ಪೂರ್ವ ಚುನಾವಣೆ ನಡೆಸದಿರಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಸಂಪುಟ ಚರ್ಚೆಯಿಲ್ಲ: ಬಹು ನಿರೀಕ್ಷಿತ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ಈ ಬಗ್ಗೆ ಅಮಿತ್ ಶಾ ಮುಖ್ಯಮಂತ್ರಿ ಬೊಮ್ಮಾಯಿಗೆ ಪ್ರತ್ಯೇಕವಾಗಿ ಸೂಚನೆ ನೀಡುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಹಾಲಿ ಇರುವ ನಿಗಮ- ಮಂಡಳಿ ಅಧ್ಯಕ್ಷರ ಬದಲಾವಣೆ ಕುರಿತಂತೆಯೂ ರಾಜ್ಯ ಮಟ್ಟದ ನಾಯಕರುಗಳೇ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಅಮಿತ್ ಶಾ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.