2023 ವಿಧಾನಸಭಾ ಚುನಾವಣೆಗೆ ಸಿದ್ಧತೆ: ಪದಾಧಿಕಾರಿಗಳ ನೇಮಕ ಪಟ್ಟಿ ಘೋಷಿಸಿದ ಕಾಂಗ್ರೆಸ್
ಕೊನೆಗೂ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಪಟ್ಟಿಯನ್ನು ಎಐಸಿಸಿ ಅಧಿಕೃತ ಘೋಷಣೆ ಮಾಡಿದೆ. ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೇಮಕಾತಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ.
Published: 10th April 2022 07:55 AM | Last Updated: 10th April 2022 07:55 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕೊನೆಗೂ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಪಟ್ಟಿಯನ್ನು ಎಐಸಿಸಿ ಅಧಿಕೃತ ಘೋಷಣೆ ಮಾಡಿದೆ. ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೇಮಕಾತಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ.
ಚುನಾವಣೆ ವರ್ಷದಲ್ಲೇ ಎಐಸಿಸಿ ನೇಮಕಗೊಳಿಸಿದ್ದು, ಮೊದಲ ಹಂತದಲ್ಲಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ನೇಮಕ ಮಾಡಿದೆ. 40 ಮಂದಿಗೆ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ಹಾಗೂ 109 ಮಂದಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.
ಮಾಜಿ ಸಚಿವ, ದ.ಕ.ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ವಿಧಾನ ಪರಿಷತ್ ಮಾಜಿ ಸದಸ್ಯ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮತ್ತು ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ಅವರನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಖ್ಯಾತ ಉದ್ಯಮಿ, ಎನ್‌ಎಸ್‌ಯುಐ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ, ದ.ಕ.ಜಿಲ್ಲಾ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮಿಥುನ್ ರೈ, ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಎ. ಬಾವಾ, ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ರಕ್ಷಿತ್ ಶಿವರಾಂ, ಕೃಪಾ ಆಳ್ವ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಆರು ತಿಂಗಳಿಂದ ನಡೆದಿತ್ತು ಕಸರತ್ತು:
ರಾಜ್ಯ ಕಾಂಗ್ರೆಸ್ 2019ರಿಂದ ಪದಾಧಿಕಾರಿಗಳಲ್ಲದೆ ಕಾರ್ಯ ನಿರ್ವಹಿಸುತ್ತಿದೆ. ಪದಾಧಿಕಾರಿಗಳ ನೇಮಕಕ್ಕೆ ಹಲವು ಬಾರಿ ಪ್ರಯತ್ನ ನಡೆದರೂ ಆಕಾಂಕ್ಷಿಗಳ ಸಂಖ್ಯೆಯ ಕಾರಣಕ್ಕೆ ನೇಮಕ ಮುಂದಕ್ಕೆ ಹಾಕಲಾಗುತ್ತಿತ್ತು. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ನೇಮಕಗೊಂಡ ನಂತರ ಹೊಸ ಟೀಮ್ ರಚಿಸಿಕೊಳ್ಳಲು ಮುಂದಾಗಿದ್ದರು. ಹೀಗಾಗಿ ಕಳೆದ ಕೆಲವು ತಿಂಗಳಿನಿಂದ ಪದಾಧಿಕಾರಿಗಳ ಆಯ್ಕೆ ಕಸರತ್ತು ನಡೆದಿತ್ತು.
ಹೊಸ ಟೀಮ್ ರಚನೆಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೈಕಮಾಂಡ್‌ಗೆ ಪಟ್ಟಿಯೊಂದನ್ನು ಕಳುಹಿಸಿದ್ದರು. ಇದರ ಬೆನ್ನಲ್ಲೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ತಮ್ಮದೇ ಆದ ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್ ಗಮನಕ್ಕೆ ಕಳುಹಿಸಿದ್ದರು. ಈ ಬೆಳವಣಿಗೆ ನಡೆದ ನಂತರ ಪಕ್ಷದ ಇತರ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ್, ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ತಮ್ಮ ಶಿಫಾರಸುಗಳ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಿದ್ದರು. ಹೀಗಾಗಿ ಪದಾಧಿಕಾರಿಗಳ ನೇಮಕ ಪಟ್ಟಿಯ ಬಗ್ಗೆ ಹೈಕಮಾಂಡ್ ಮತ್ತು ಕೆಪಿಸಿಸಿ ಮಧ್ಯೆ ಗೊಂದಲ ಉಂಟಾಗಿತ್ತು ಎನ್ನಲಾಗುತ್ತಿದೆ.