ಈಶ್ವರಪ್ಪನವರು ಶೀಘ್ರವೇ ಆರೋಪಗಳಿಂದ ಮುಕ್ತರಾಗುತ್ತಾರೆ, ರಾಜೀನಾಮೆ ನೀಡಲು ಒತ್ತಡವಿರಲಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಯಾರ ಒತ್ತಡವೂ ಇಲ್ಲ, ಶೀಘ್ರದಲ್ಲಿಯೇ ಅವರು ಆರೋಪಗಳಿಂದ ಮುಕ್ತವಾಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Published: 15th April 2022 08:35 AM | Last Updated: 15th April 2022 12:43 PM | A+A A-

ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಯಾರ ಒತ್ತಡವೂ ಇಲ್ಲ, ಶೀಘ್ರದಲ್ಲಿಯೇ ಅವರು ಆರೋಪಗಳಿಂದ ಮುಕ್ತವಾಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಗ್ಗೆ ಕೇಳಿದಾಗ, ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಜೆ ಜಾರ್ಜ್ ರಾಜೀನಾಮೆ ನೀಡಿದ ನಂತರ ಅವರ ಬಂಧನವಾಗಿತ್ತೇ, ಆಗ ಬಿಜೆಪಿ ನಾಯಕರು ಜಾರ್ಜ್ ಅವರ ಬಂಧನಕ್ಕೆ ಆಗ್ರಹಿಸಿರಲಿಲ್ಲ ಎಂದು ಹೇಳಿದರು.
ವಿರೋಧ ಪಕ್ಷದವರು ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಹೇಳಿಕೆಗಳನ್ನು, ತೀರ್ಮಾನಗಳನ್ನು ಕೊಡಲು ಅವರೇನು ನ್ಯಾಯಾಧೀಶರೇ ಅಥವಾ ಪೊಲೀಸರೇ, ಪ್ರಕರಣವನ್ನು ಈಗಾಗಲೇ ತನಿಖೆಗೊಪ್ಪಿಸಲಾಗಿದ್ದು ಸತ್ಯಾಸತ್ಯತೆ ಹೊರಬರಲಿ ಎಂದರು.
ಇಂದು ಸಂಜೆ ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ, ಈಶ್ವರಪ್ಪ ತಮ್ಮದೇ ನಿರ್ಧಾರದಿಂದ ರಾಜೀನಾಮೆ ನೀಡುತ್ತಿದ್ದಾರೆ, ಈ ವಿಷಯದಲ್ಲಿ ಬಹಳ ಸ್ಪಷ್ಟವಾಗಿದ್ದಾರೆ. ನಿನ್ನೆ ರಾತ್ರಿ ದೂರವಾಣಿ ಮೂಲಕ ಅವರಲ್ಲಿ ಮಾತನಾಡಿದ್ದೇನೆ, ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ಶೀಘ್ರವೇ ಮಾಡಿ ಎಂದು ಹೇಳಿದ್ದಾರೆ, ಆದಷ್ಟು ಬೇಗ ಅವರು ಆರೋಪಗಳಿಂದ ಮುಕ್ತರಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ
ಎಲ್ಲಾ ಆಯಾಮಗಳಿಂದಲೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲಾಗುತ್ತದೆ. ಆದಷ್ಟು ಬೇಗನೆ ತನಿಖೆ ಮಾಡಿ ಅವರು ಶೀಘ್ರ ಆರೋಪಗಳಿಂದ ಮುಕ್ತರಾಗುತ್ತಾರೆ ಎಂಬ ವಿಶ್ವಾಸವಿದೆ,ತನಿಖೆಯಿಂದ ಸತ್ಯಾಂಶ ಹೊರಬರುತ್ತದೆ ಎಂದರು.
ಇಂದು ಗದಗದ ತೋಂಟದಾರ್ಯ ಮಠದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದು ಅದಕ್ಕೂ ನಂತರ ಮಧ್ಯಾಹ್ನ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಇಂದು ಸಂಜೆ ಈಶ್ವರಪ್ಪ ರಾಜೀನಾಮೆ: ಇಂದು ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಲಿರುವ ಕೆ ಎಸ್ ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಆರಂಭದಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ, ಇದರಲ್ಲಿ ತಮ್ಮ ಪಾತ್ರವೇನೂ ಇಲ್ಲ, ಸಂತೋಷ್ ಆತ್ಮಹತ್ಯೆ ಪ್ರಕರಣ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಾವು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳುತ್ತಿದ್ದ ಸಚಿವ ಕೆ ಎಸ್ ಈಶ್ವರಪ್ಪ ನಿನ್ನೆ ದಿಢೀರ್ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷ ಮುಜುಗರದಿಂದ ತಪ್ಪಿಸಿಕೊಳ್ಳಲು, ವಿರೋಧ ಪಕ್ಷಗಳಿಗೆ ಪ್ರಮುಖ ಅಸ್ತ್ರವಾಗದಂತೆ ನೋಡಿಕೊಳ್ಳಲು ಬಿಜೆಪಿ ಹೈಕಮಾಂಡ್ ಈಶ್ವರಪ್ಪನವರಿಗೆ ರಾಜೀನಾಮೆ ನೀಡಲು ಸೂಚಿಸಿದೆ ಎಂದು ಹೇಳಲಾಗುತ್ತಿದೆ.