2023 ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಬಿಎಸ್ವೈ ವಿಶ್ವಾಸ
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಹೇಳಿದ್ದಾರೆ.
Published: 20th April 2022 08:14 AM | Last Updated: 20th April 2022 12:34 PM | A+A A-

ಬಿ.ಎಸ್.ಯಡಿಯೂರಪ್ಪ
ದಾವಣಗೆರೆ: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ೧೫೦ ಸ್ಥಾನ ಗಳಿಸಲೇಬೇಕು ಎಂಬ ತೀರ್ಮಾನ ಕೈಗೊಂಡಿರುವ ನಿಟ್ಟಿನಲ್ಲಿ 4-5 ತಂಡಗಳು ರಾಜ್ಯ ಪ್ರವಾಸ ರೂಪುರೇಷೆ ಸಿದ್ದವಾಗಿದೆ. 150 ಸ್ಥಾನ ಗಳಿಸುವ ಗುರಿ ಇಟ್ಟುಕೊಂಡಿದ್ದೇವೆ. 5-10 ಸೀಟು ಆಕಡೆ, ಈಕಡೆ ಆಗಬಹುದು. ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಸಭಾ ಚುನಾವಣೆಗೆ ಒಂದು ವರ್ಷದ ಮುನ್ನವೇ ನಿಶ್ಚಿತ ಗುರಿ ಇಟ್ಟುಕೊಂಡು ಪ್ರವಾಸ, ಕಾರ್ಯಕರ್ತರು, ಸಾರ್ವಜನಿಕರ ಭೇಟಿ, ಮನೆ ಮನೆಗೆ ಪ್ರಧಾನಮಂತ್ರಿಯವರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇದೇ ಮೊದಲು. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಆರಂಭವಾಗಿದೆ. ದಾವಣಗೆರೆಯಲ್ಲಿನ ವಿಭಾಗೀಯ ಸಭೆ ಮುಗಿದ 4-5 ದಿನಗಳಲ್ಲಿ ನಮ್ಮ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು 150ಕ್ಕೂ ಹೆಚ್ಚು ಸ್ಥಾನ ಗಳಿಸಿ, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಪುನರುಚ್ಚರಿಸಿದರು.
ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ನಾಲ್ಕು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಜನರು ಸಹ ಕಾಂಗ್ರೆಸ್ನ್ನು ತಿರಸ್ಕರಿಸುತ್ತಿದ್ದಾರೆ. ಪ್ರಧಾನಿಯವರ ಕಾಂಗ್ರೆಸ್ ಮುಕ್ತ ಭಾರತ… ನಿರ್ಮಾಣದ ಹೇಳಿಕೆ ಕಾರ್ಯಗತ ಆಗಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊಂಚ ಉಸಿರಾಡುತ್ತಿದೆ. ಕಾಂಗ್ರೆಸ್ಗೆ ಉಳಿಗಾಲ ಇಲ್ಲ. ಮುಂದಿನ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸುವ ನಿಟ್ಟಿನಲ್ಲಿ ಶಕ್ತಿ ಮೀರಿ ಪ್ರಾಮಾಣಿಕ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.