ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಎನ್ ಐ ಎಗೆ ವಹಿಸಿರುವುದು ಕಣ್ಣೊರೆಸುವ ತಂತ್ರ: ಬಿಕೆ ಹರಿಪ್ರಸಾದ್

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭಾನುವಾರ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಭೇಟಿ ನೀಡಿ ಸಾಂತ್ವನ ತಿಳಿಸಿದರು
ಬಿ.ಕೆ ಹರಿಪ್ರಸಾದ್
ಬಿ.ಕೆ ಹರಿಪ್ರಸಾದ್

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭಾನುವಾರ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಭೇಟಿ ನೀಡಿ ಸಾಂತ್ವನ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಕೆ.ಹರೀಶ್, ರಾಜ್ಯದಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದರು.

15 ದಿನಗಳಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದರು. ಬಿಜೆಪಿ ಸರಕಾರದಲ್ಲಿ ಅವರ ಕಾರ್ಯಕರ್ತರಿಗೆ ರಕ್ಷಣೆ ನೀಡಲಾಗುತ್ತಿಲ್ಲ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದರು.

ಪ್ರಕರಣದ ತನಿಖೆಯನ್ನು ಎನ್‌ಐಎ ಸಂಸ್ಥೆಗೆ ವಹಿಸಿರುವುದು ಕೇವಲ ಕಣ್ಣೊರೆಸುವ ತಂತ್ರವಾಗಿದೆ. ತಮ್ಮ ವೈಫಲ್ಯವನ್ನು ಮರೆಮಾಚಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ರೀತಿ ಮಾಡಿದ್ದಾರೆ. ಈ ಹಿಂದೆ ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಪರೇಶ್ ಮೇಸ್ತ ಕೊಲೆಯಾದಾಗ ಬಿಜೆಪಿಯು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೇಶ್ ಮೇಸ್ತ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರೂ ಕೂಡ ಇನ್ನೂ ಪ್ರಗತಿ ಕಂಡಿಲ್ಲ ಎಂದ ಹರಿಪ್ರಸಾದ್, ಇನ್ನು ಎರಡು ವಾರದೊಳಗೆ ಸರಣಿ ಹತ್ಯೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಯಂತೆ ಗೃಹ ಸಚಿವರೂ ಕೂಡ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಗೃಹ ಸಚಿವರ ಮನೆಗೆ ನುಗ್ಗಿದ ಆರೋಪದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರನ್ನು ವಾರದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೊಳ ಪಡಿಸಲಾಗಿತ್ತು. ಆದರೆ ಮೊನ್ನೆ ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಿದ್ದರೂ ಅವರ ವಿರುದ್ಧ ಯಾವ ಪ್ರಕರಣವನ್ನೂ ದಾಖಲಿಸಿಲ್ಲ.

ಬಿಜೆಪಿ ಸರಕಾರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಾರತಮ್ಯದ ಆಡಳಿತ ನಡೆಸುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಎಂಬುವುದನ್ನು ಮರೆತು ಒಂದು ಪಕ್ಷದ ಮುಖ್ಯಮಂತ್ರಿ ಎಂಬಂತೆ ವರ್ತಿಸುತ್ತಿದ್ದಾರೆ. ಹಾಗಾಗಿ ತಕ್ಷಣ ಮುಖ್ಯಮಂತ್ರಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದು ರಾಜ್ಯ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶ ಮಾದರಿ ಹೇಳಿಕೆಗೆ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯುಪಿ ಕೊಲೆ, ಅತ್ಯಾಚಾರ ಮತ್ತು ಡಕಾಯಿತಿಗಳಲ್ಲಿ ಮುಂಚೂಣಿಯಲ್ಲಿದೆ, ಕರ್ನಾಟಕಕ್ಕೆ ಅಂತಹ ಮಾದರಿ ಅಗತ್ಯವಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com