'ನಿವೃತ್ತಿ ಹೊಂದಲು ನಾನು ಬಯಸಿರಲಿಲ್ಲ, ಹೊಸ ಹುದ್ದೆ ಅಚ್ಚರಿ ತಂದಿದೆ, ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ': ಬಿ ಎಸ್ ಯಡಿಯೂರಪ್ಪ

ಅನಿರೀಕ್ಷಿತವಾಗಿ ಪಕ್ಷದ ಹೈಕಮಾಂಡ್ ನನಗೆ ಹೊಸ ದೊಡ್ಡ ಜವಾಬ್ದಾರಿಯನ್ನು ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಅನಿರೀಕ್ಷಿತವಾಗಿ ಪಕ್ಷದ ಹೈಕಮಾಂಡ್ ನನಗೆ ಹೊಸ ದೊಡ್ಡ ಜವಾಬ್ದಾರಿಯನ್ನು ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿ ಹಾಗೂ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಬಡ್ತಿ ನೀಡಿ ಹೈಕಮಾಂಡ್ ನಿಂದ ಆದೇಶ ಹೊರಬಂದ ನಂತರ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ತಮ್ಮ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ತರಬೇಕೆಂದು ತೀರ್ಮಾನಿಸಿದ್ದೆ. 

ಪಕ್ಷವು ಕಾರ್ಯಕರ್ತರ ಶ್ರಮ, ಪ್ರಯತ್ನಗಳನ್ನು ಗುರುತಿಸುತ್ತದೆ. ರಾಜಕೀಯ ಮತ್ತು ಸಾರ್ವಜನಿಕ ಬದುಕಿನಿಂದ ನಾನು ನಿವೃತ್ತನಾಗಬೇಕೆಂದು ಯಾವತ್ತೂ ಬಯಸಿರಲಿಲ್ಲ. ಮುಂದಿನ ವರ್ಷ ರಾಜ್ಯದಲ್ಲಿ 140 ಸೀಟುಗಳನ್ನು ಗೆದ್ದು ಸಂಪೂರ್ಣ ಬಲದೊಂದಿಗೆ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಬೇರೆ ಪಕ್ಷ ಅಧಿಕಾರಕ್ಕೆ ಬರಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಬಿಎಸ್ ವೈಗೆ ರಾಷ್ಟ್ರಮಟ್ಟದ ಸ್ಥಾನ: ಕಳೆದ ವರ್ಷ ಜುಲೈನಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಪಕ್ಷದಲ್ಲಿ ಬಿಎಸ್ ವೈಯವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಊಹಾಪೋಹಗಳ ನಡುವೆ ಇದೀಗ ಹೈಕಮಾಂಡ್ ಅವರನ್ನು ಪಕ್ಷದ ಪ್ರಮುಖ ಸಮಿತಿಗಳಲ್ಲಿ ಸೇರಿಸಿಕೊಂಡಿದೆ. ಈ ಕ್ರಮವು ಕರ್ನಾಟಕದಲ್ಲಿ ಬಿಜೆಪಿಗೆ ದೊಡ್ಡ ಉತ್ತೇಜನವನ್ನು ನೀಡಿದೆ. ಅವರು ಈಗ ಕರ್ನಾಟಕದಲ್ಲಿ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ದೊಡ್ಡ ಪಾತ್ರವನ್ನು ವಹಿಸುವ ಸಾಧ್ಯತೆಯಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಯಡಿಯೂರಪ್ಪ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಅವರ ಸೇವೆ ಕರ್ನಾಟಕದಲ್ಲಿ ಮಾತ್ರವಲ್ಲದೆ ದಕ್ಷಿಣ ಭಾರತದ ರಾಜ್ಯಗಳಾದ್ಯಂತ ಅಗತ್ಯವಿದೆ ಎಂದು ಹೇಳಿದರು ಎಂದು ಸುದ್ದಿಗೋಷ್ಠಿಯಲ್ಲಿ ಬಿಎಸ್ ವೈ ಹೇಳಿದ್ದಾರೆ. 

ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಆರಂಭದ ದಿನಗಳಲ್ಲಿ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೆ. ನಮ್ಮ ನಾಯಕರು ನನ್ನ ಸಾಮರ್ಥ್ಯ ಕಂಡು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಪಕ್ಷಕ್ಕಾಗಿ ದುಡಿಯುವುದನ್ನು ನಾನು ಎಂದಿಗೂ ನಿಲ್ಲಿಸುವುದಿಲ್ಲ ಎಂದಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಮುಂದಿನ ಕೆಲವೇ ದಿನಗಳಲ್ಲಿ ಕರ್ನಾಟಕದ ರಾಜಕೀಯ ದೃಶ್ಯ ಬದಲಾಗಲಿದೆ. ಮುಂದಿನ ಸಿಎಂ ಆಗುತ್ತೇನೆ ಎಂದು ಭಾವಿಸಿರುವ ಕೆಲ ನಾಯಕರಿಗೆ ನಿರಾಸೆಯಾಗಿದೆ. 2023ರ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ಹೇಳಿದರು.

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕಾಂಗ್ರೆಸ್ ನಾಯಕರು ಹರಸಾಹಸ ಪಡುತ್ತಿರುವಾಗಲೇ ಬಿಜೆಪಿಯಲ್ಲಿ ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಪ್ರಮುಖ ಸ್ಥಾನಮಾನ ನೀಡಿದೆ. ಬೆಂಗಳೂರಿನಲ್ಲಿ ಸ್ವಾತಂತ್ರ್ಯ ದಿನದಂದು ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ‘ಸಿದ್ದರಾಮೋತ್ಸವ’ ಹಾಗೂ ಪಾದಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರನ್ನಾಗಿ ನೇಮಿಸುವುದರಿಂದ 2023 ರ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರ ನೈತಿಕತೆಯನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

ಕಳೆದ ಕೆಲವು ತಿಂಗಳುಗಳಲ್ಲಿ ಹಿಜಾಬ್, ಹಲಾಲ್ ಮಾಂಸ, ಪಠ್ಯಪುಸ್ತಕ ವಿವಾದ, ದೇವಸ್ಥಾನಗಳ ಬಳಿ ಮುಸ್ಲಿಂ ಮಾರಾಟಗಾರರಿಗೆ ಅವಕಾಶ ನೀಡದಿರುವುದು, ದಕ್ಷಿಣ ಕನ್ನಡದಲ್ಲಿ ನಡೆದ ಕೊಲೆಗಳು ಮತ್ತು ಸಾವರ್ಕರ್ ಪೋಸ್ಟರ್ ವಿವಾದಗಳು ಪಕ್ಷದ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ನಾವು ಇಂತಹ ಯಾವುದೇ ಸಮಸ್ಯೆ ಎದುರಿಸಿರಲಿಲ್ಲ. ಅವರು ಕರ್ನಾಟಕದಲ್ಲಿ ಬಿಜೆಪಿಗೆ ಅನಿವಾರ್ಯ ಎಂದು ಪ್ರತಿಕ್ರಿಯಿಸಿದ್ದಾರೆ. 

ರಾಜಕೀಯ ವಿಶ್ಲೇಷಕ ಪ್ರೊ ಸಂದೀಪ್ ಶಾಸ್ತ್ರಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿ, ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಿದ ಹಿರಿಯ ನಾಯಕನಿಗೆ ಹೈಕಮಾಂಡ್ ಈಗ ಪ್ರಮುಖ ಸ್ಥಾನಮಾನ ನೀಡಿದೆ. ಯಡಿಯೂರಪ್ಪ ಅವರನ್ನು ಮಾರ್ಗದರ್ಶಕ ಮಂಡಲಕ್ಕೆ ಸೇರಿಸಬಹುದು ಎಂದು ಹಲವರು ಭಾವಿಸಿದ್ದರು. ಈ ಮೂಲಕ ಅವರು ಕರ್ನಾಟಕದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದಾರೆ ಎಂಬುದನ್ನು ಸೂಚಿಸುತ್ತದೆ ಎಂದಿದ್ದಾರೆ.

ಯಡಿಯೂರಪ್ಪನವರಿಗೆ ಅವರ ಪಾತ್ರ ಈಗ ರಾಷ್ಟ್ರಮಟ್ಟಕ್ಕೆ ವಿಸ್ತರಿಸಿರುವುದು ಔನ್ನತ್ಯವಾಗಿದೆ ಎಂದು ಪ್ರೊ.ಶಾಸ್ತ್ರಿ ಹೇಳಿದ್ದಾರೆ. 2023 ರಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಅಥವಾ ಶಾಸಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗುತ್ತಿಲ್ಲ ಎಂದಿದ್ದಾರೆ. 

ಕಾಂಗ್ರೆಸ್ ಈ ಬೆಳವಣಿಗೆ ಬಗ್ಗೆ ಟೀಕಿಸಿದೆ. ಇದೀಗ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತಕ್ಕಾಗಿ ಯಡಿಯೂರಪ್ಪನವರನ್ನು ಅವಲಂಬಿಸಿದ್ದು, ಒಮ್ಮೆ ಚುನಾವಣೆ ಮುಗಿದರೆ ಮತ್ತೆ ಅವರನ್ನು ಕೆಳಗಿಳಿಸಲಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com