ಕಲಬುರಗಿಯಲ್ಲಿಂದು 'ಕಲ್ಯಾಣ ಕ್ರಾಂತಿ' ಕಾಂಗ್ರೆಸ್ ಸಮಾವೇಶ; ಡಾ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ; ನಾಯಕರು ಭಾಗಿ

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (AICC) ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ಡಾ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರೂರಿಗೆ ಆಗಮಿಸುತ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ:  ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (AICC) ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ಡಾ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರೂರಿಗೆ ಆಗಮಿಸುತ್ತಿದ್ದಾರೆ. ತವರೂರಿಗೆ ಆಗಮಿಸುತ್ತಿರುವ ಅವರಿಗೆ ಕಲಬುರಗಿಯಲ್ಲಿ ಅದ್ಧೂರಿ ಸ್ವಾಗತ ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೇ ವೇಳೆ ‘ಕಲ್ಯಾಣ ಕ್ರಾಂತಿ’ ಹೆಸರಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಬೃಹತ್‌ ಕಾಂಗ್ರೆಸ್‌ ಸಮಾವೇಶವನ್ನೂ ಹಮ್ಮಿಕೊಳ್ಳಲಾಗಿದೆ.

ಇನ್ನು ಮೂರು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು , ಈ ನಿಟ್ಟಿನಲ್ಲಿ ತನ್ನದೇ ತಂತ್ರ ಹೆಣೆಯುತ್ತಿರುವ ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆ ಸಮಾವೇಶ ಜೊತೆಗೆ ಕಲ್ಯಾಣ ಕ್ರಾಂತಿಯನ್ನು ಕೂಡ ಹಮ್ಮಿಕೊಂಡಿದೆ. ಸಮಾವೇಶದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರದ ಎಲ್ಲಾ 41 ಅಸೆಂಬ್ಲಿ ಕ್ಷೇತ್ರಗಳಿಂದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಖರ್ಗೆ ಸ್ವಾಗತ ನೆಪದಲ್ಲಿ ಕಾಂಗ್ರೆಸ್‌ನಿಂದ ಬೃಹತ್‌ ಶಕ್ತಿ ಪ್ರದರ್ಶನ ನಡೆಯಲಿದೆ. ಈ ಬೃಹತ್‌ ಕಾರ್ಯಕ್ರಮದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಖರ್ಗೆಯವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಶನಿವಾರ ಬೆಳಗ್ಗೆ 10.40ಕ್ಕೆ ಕಲಬುರಗಿಗೆ ಬಂದಿಳಿಯಲಿದ್ದು, ಆ ಬಳಿಕ ನಗರವೇಶ್ವರ ಶಾಲೆ ಮೈದಾನದಲ್ಲಿ ಖರ್ಗೆ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಗುವುದು. ಅಲ್ಲಿಂದ ಪಕ್ಷದ ಕಾರ್ಯಕರ್ತರೆಲ್ಲರೂ ಸೇರಿ ಸಮಾವೇಶ ನಡೆಯಲಿರುವ ಎನ್‌.ವಿ. ಕಾಲೇಜುವರೆಗೆ 4 ಕಿಲೋ ಮೀಟರ್ ಮೆರವಣಿಗೆ ನಡೆಸಲಿದ್ದಾರೆ.

ಗಣ್ಯರು ಭಾಗಿ: ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌, ದಿನೇಶ್‌ ಗುಂಡೂರಾವ್‌, ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಎಚ್‌.ಕೆ.ಪಾಟೀಲ್‌, ಕೆ.ಎಚ್‌.ಮುನಿಯಪ್ಪ, ಡಾ.ಜಿ.ಪರಮೇಶ್ವರ್‌ ಮತ್ತಿತರರು ಸೇರಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಕಾಂಗ್ರೆಸ್‌ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com