ಬಿಜೆಪಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡಲಿದೆ: ಯತ್ನಾಳ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ಬಿಜೆಪಿ ಬ್ರೇಕ್ ಹಾಕಲಿದ್ದು, ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಂಗಳವಾರ ಹೇಳಿದ್ದಾರೆ.
ಬಸನಗೌಡ ಪಾಟೀಲ್‌ ಯತ್ನಾಳ್‌
ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ಬಿಜೆಪಿ ಬ್ರೇಕ್ ಹಾಕಲಿದ್ದು, ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, ಹಿರಿಯ ನಾಯಕರನ್ನು ಕಡೆಗಣಿಸಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಮುಖಗಳನ್ನು ಕಣಕ್ಕಿಳಿಸಿದ ಗುಜರಾತ್ ಮಾದರಿಯಲ್ಲಿ ಆಕಾಂಕ್ಷಿಗಳಿಗೆ ಟಿಕೆಟ್ ನೀಡಲಾಗುವುದು. ರಾಜಕೀಯದಲ್ಲಿ ಕುಟುಂಬ ರಾಜಕಾರಣ ತಪ್ಪಿಸಲು, ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡಲು ಪಕ್ಷವು ಉತ್ಸುಕವಾಗಿದೆ ಎಂದಿದ್ದಾರೆ.

ಪಕ್ಷದಲ್ಲಿನ ಹೊಸ ಮುಖಗಳನ್ನು ಗುರುತಿಸಲು ಕರ್ನಾಟಕದಲ್ಲಿಯೂ ಗುಜರಾತ್ ಮಾದರಿಯನ್ನು ಅನುಸರಿಸಬೇಕು. ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ನಾಯಕರನ್ನು ಕೈಬಿಡುವುದು ಖಚಿತ ಎಂದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಸಚಿವ ಸಂಪುಟ ವಿಸ್ತರಣೆಗೆ ಯಾರೂ ಉತ್ಸುಕರಾಗಿಲ್ಲ. `ಮುಖ್ಯಮಂತ್ರಿ ಅವರು ಎಲ್ಲ ಖಾತೆಗಳನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ರಾಜ್ಯದಲ್ಲಿ ಸರ್ಕಾರದ ಅವಧಿಗೆ ಮೂರ್ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವೊಬ್ಬ ಶಾಸಕರೂ ಗಂಭೀರವಾಗಿಲ್ಲ. ಚುನಾವಣೆ ನಂತರವೇ ಸಚಿವರಾಗಲು ಎಲ್ಲರೂ ಕಾಯುತ್ತಿದ್ದಾರೆ,'' ಎಂದರು.

2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಭವಿಷ್ಯ ನುಡಿದ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ತಳ್ಳಿಹಾಕಿದ ಅವರು, ವಿಧಾನಸಭೆ ಚುನಾವಣೆಗೆ ಮೊದಲು ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಇದೇ ರೀತಿಯ ಸಮೀಕ್ಷೆಗಳನ್ನು ನಡೆಸಲಾಗಿತ್ತು. ಆದರೆ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com