ಕಾಂಗ್ರೆಸ್ ಉಗ್ರರ ಪರವೋ, ದೇಶದ ಪರವೋ ಸ್ಪಷ್ಟಪಡಿಸಲಿ: ಸಿಎಂ ಬೊಮ್ಮಾಯಿ

ಮತದಾರರ ದತ್ತಾಂಶ ಕಳ್ಳತನ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ಸರ್ಕಾರ ಮಂಗಳೂರಿನ ಕುಕ್ಕರ್ ಸ್ಫೋಟ ಪ್ರಕರಣವನ್ನು ಭಯೋತ್ಪಾದಕ ಕೃತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆರೋಪಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಹಿರಿಯ ನಾಯಕರು ಶುಕ್ರವಾರ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಮತದಾರರ ದತ್ತಾಂಶ ಕಳ್ಳತನ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ಸರ್ಕಾರ ಮಂಗಳೂರಿನ ಕುಕ್ಕರ್ ಸ್ಫೋಟ ಪ್ರಕರಣವನ್ನು ಭಯೋತ್ಪಾದಕ ಕೃತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆರೋಪಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಹಿರಿಯ ನಾಯಕರು ಶುಕ್ರವಾರ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ನಾಯಕರು ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಲಘುವಾಗಿ ಮಾತನಾಡುತ್ತಾರೆ, ಭಯೋತ್ಪಾದಕರಿಗೆ ಬೆಂಬಲ ನೀಡುತ್ತಾರೆ ಮತ್ತು ಭಯೋತ್ಪಾದಕರನ್ನು ಗಲ್ಲಿಗೇರಿಸಿದಾಗ ಟೀಕಿಸುತ್ತಾರೆ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಭಯೋತ್ಪಾದಕರ ಪರವೋ ಅಥವಾ ದೇಶಭಕ್ತರ ಪರವೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಪೊಲೀಸ್ ಇಲಾಖೆ ಮತ್ತು ರಾಷ್ಟ್ರದ ನೈತಿಕತೆಯ ಮೇಲೆ ಪರಿಣಾಮ ಬೀರುವ ಹೇಳಿಕೆಗಳನ್ನು ನೀಡುವುದು ದೇಶಭಕ್ತರ ಕೆಲಸವಲ್ಲ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಿಬಿದ್ದರೆ, ನಡೆಯುತ್ತಿರುವ ತನಿಖೆಯನ್ನು ಪ್ರಶ್ನಿಸುವುದು ಭಯೋತ್ಪಾದಕ ಸಂಘಟನೆಗಳಿಗೆ ನೈತಿಕ ಬೆಂಬಲ ನೀಡಿದಂತಾಗುತ್ತದೆ ಎಂದರು.

ಪ್ರೆಶರ್ ಕುಕ್ಕರ್‌ನಲ್ಲಿ ವ್ಯಕ್ತಿಯೊಬ್ಬರು ಬಾಂಬ್ ತಯಾರಿಕೆ ಸಾಮಗ್ರಿಗಳನ್ನು ಸಾಗಿಸುತ್ತಿದ್ದಾಗ ಸ್ಫೋಟಗೊಂಡಿದ್ದು, ಆರೋಪಿಗಳು ಮಂಗಳೂರು ನಗರದಲ್ಲಿ ಸ್ಫೋಟ ನಡೆಸಲು ಯೋಜಿಸಿದ್ದರು ಎಂಬುದು ಸ್ಪಷ್ಟವಾಗಿದೆ. ಗುರುತು ಮರೆಮಾಚಿದ್ದ ಬಂಧಿತ ವ್ಯಕ್ತಿ 2-3 ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಈ ಭಯೋತ್ಪಾದಕ ದೇಶದ ಹೊರಗೆ ಸಂಪರ್ಕ ಹೊಂದಿದ್ದ ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಓರ್ವ ಹಿರಿಯ ರಾಜಕಾರಣಿ. ಏನೇ ಮಾತನಾಡಬೇಕಾದರೂ ಮೊದಲು ವಿಷಯ ತಿಳಿದುಕೊಂಡು ಮಾತನಾಡಲಿ. ಅಲ್ಪಸಂಖ್ಯಾತರ ಓಲೈಕೆಗಾಗಿ ಭಯೋತ್ಪಾದಕನ ಬಗ್ಗೆ ಅನುಕಂಪ ಬೇಡ. ಅವರ ಹೇಳಿಕೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.

ಭಯೋತ್ಪಾದಕರಿಗೆ ಬೆಂಬಲ ಕೊಟ್ಟು ಚುನಾವಣೆಯಲ್ಲಿ ಹೆಚ್ಚಿನ ಮತ ಪಡೆಯಬಹುದೆಂಬ ನಿಮ್ಮ ಲೆಕ್ಕಾಚಾರ ಈಡೇರುವುದಿಲ್ಲ. ಇನ್ನು ಎಷ್ಟು ದಿನ ಈ ರೀತಿ ಓಲೈಕೆ ರಾಜಕಾರಣ ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಇದೇ ವೇಳೆ ಮತದಾರರ ದತ್ತಾಂಶ ಕಳವು ಪ್ರಕರಣದ ಕುರಿತು ಶಿವಕುಮಾರ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ, 2017 ರಲ್ಲಿ ಆ ಕಂಪನಿಗೆ ಅಂದಿನ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿತ್ತು. ಬಿಜೆಪಿ ಸರಕಾರ ತನಿಖೆಗೆ ಆದೇಶಿಸಿದ್ದು, ಪೊಲೀಸರು ತನಿಖೆ ನಡೆಸಿ ಕೆಲವರನ್ನು ಬಂಧಿಸಿದ್ದಾರೆ ಎಂದರು.

ಶಿವಕುಮಾರ್ ಅವರು ತಮ್ಮ ಹೇಳಿಕೆಗಾಗಿ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಕಂದಾಯ ಸಚಿವ ಆರ್ ಅಶೋಕ ಅವರು ಆಗ್ರಹಿಸಿದರು.

ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಂತ್ ನಾರಾಯಣ್ ಅವರು ಮಾತನಾಡಿ, ಡಿಕೆ ಶಿವಕುಮಾರ್ ಅವರು ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದು, ಅವರು "ಭಯೋತ್ಪಾದಕರ ಸುಲ್ತಾನ್" ಆಗಿದ್ದಾರೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com