ಬಿಜೆಪಿ ಶಾಸಕ ಪ್ರೀತಂ ಗೌಡ ಮಣಿಸಲು ಜೆಡಿಎಸ್ ರಣತಂತ್ರ: ಹಾಸನ ವಿಧಾನಸಭೆ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧಿಸಲು ಗ್ರೀನ್ ಸಿಗ್ನಲ್?

ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ 2023ರ ವಿಧಾನಸಭಾ ಚುನಾವಣೆಗೆ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಭವಾನಿ ರೇವಣ್ಣ
ಭವಾನಿ ರೇವಣ್ಣ

ಹಾಸನ: ಮುಂಬರುವ ವಿಧಾನಸಭೆ ಚುನಾವಣೆಗಾಗಿ ಜೆಡಿಎಸ್ ತಯಾರಿ ನಡೆಸುತ್ತಿದೆ. ಇತ್ತೀಚೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ 2023ರ ವಿಧಾನಸಭಾ ಚುನಾವಣೆಗೆ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ನಡೆದ ಕುಟುಂಬ ಸದಸ್ಯರ ಗೌಪ್ಯ ಸಭೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಹಸಿರು ನಿಶಾನೆ ತೋರಿದ್ದಾರೆ ಎಂದು ಗೌಡರ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಜೆಡಿಎಸ್ ನಾಯಕರು ಹಾಸನ ವಿಧಾನಸಭಾ ಕ್ಷೇತ್ರವನ್ನು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೆಂದು ಪರಿಗಣಿಸಿದ್ದಾರೆ, ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಾಸನ ವಿಧಾನಸಭಾ ಕ್ಷೇತ್ರಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಲಾಗಿತ್ತು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ 50 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಗೆಲ್ಲುತ್ತೇನೆ ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಜೆಡಿಎಸ್ ಮುಖಂಡರಿಗೆ ಸವಾಲು ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

ತಮ್ಮ ವಿರುದ್ಧ ಸ್ಪರ್ಧಿಸಿ ಗೆಲ್ಲುವಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೂ ಪ್ರೀತಂ ಆಹ್ವಾನ ನೀಡುತ್ತಿದ್ದರು. ಪ್ರೀತಂ ಗೌಡ ಅವರ ಕಟು ಹೇಳಿಕೆಗಳಿಂದ ಅಸಮಾಧಾನಗೊಂಡಿರುವ ಜೆಡಿಎಸ್ ನಾಯಕರು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಸಲು ರಣತಂತ್ರ ಹೆಣೆಯುತ್ತಿದ್ದಾರೆ.

ಜೆಡಿಎಸ್ ನಾಯಕರು ಪಕ್ಷದಲ್ಲಿನ ಬಂಡಾಯ ಚಟುವಟಿಕೆಗಳನ್ನು ತಪ್ಪಿಸಲು 93 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹಾಸನ ಜಿಲ್ಲೆಯ ಎಲ್ಲಾ 7 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಉದ್ದೇಶಪೂರ್ವಕವಾಗಿ ಸೇರಿಸಲಿಲ್ಲ.

ಹಾಸನದಿಂದ ಕಣಕ್ಕಿಳಿಯಲು ಬಯಸಿದ್ದ ಭವಾನಿ ರೇವಣ್ಣ ಮೊಟ್ಟಮೊದಲ ಬಾರಿಗೆ  ತಮ್ಮ ಹುಟ್ಟುಹಬ್ಬವನ್ನು ಹಾಸನ ನಗರದಲ್ಲಿ ಅದ್ಧೂರಿಯಾಗಿ ಆಚರಿಸಿಕೊಂಡಿದ್ದನ್ನು ಸ್ಮರಿಸಬಹುದು. ನೂರಾರು ಜೆಡಿಎಸ್ ಕಾರ್ಯಕರ್ತರು 500 ಕೆಜಿ ತೂಕದ ಹಾರ ಹಾಕಿ ಸ್ವಾಗತಿಸಿದರು.

ಜೆಡಿಎಸ್ ಕಾರ್ಯಕರ್ತರು  ಹೇಮಾವತಿ ಪ್ರತಿಮೆ ವೃತ್ತದ ಮುಂಭಾಗದಲ್ಲಿ ಸಾರ್ವಜನಿಕರಿಗೆ ಸಾಮೂಹಿಕ ಊಟದ ವ್ಯವಸ್ಥೆ ಮಾಡಿದ್ದರು. ಈ ಸಂದರ್ಭದಲ್ಲಿ ಭವಾನಿ ಅವರನ್ನು ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿ ಯುವಕರು ಘೋಷಣೆಗಳನ್ನು ಕೂಗಿದ್ದರು.

ಭವಾನಿ  ರೇವಣ್ಣ  ಮಹಿಳಾ ಸ್ವ ಗುಂಪುಗಳನ್ನು ಭೇಟಿಯಾಗುವುದು ಮತ್ತು ಮದುವೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದರು, ಕ್ಷೇತ್ರದಲ್ಲಿ ಗೃಹಪ್ರವೇಶ ಸಮಾರಂಭಗಳಿಗೂ ತೆರಳುತ್ತಿದ್ದರು. ಭವಾನಿ ಸ್ವಯಂಪ್ರೇರಣೆಯಿಂದ ವಿವಿಧ ಎನ್‌ಜಿಒಗಳಿಗೆ ದೇಣಿಗೆ ನೀಡುತ್ತಿದ್ದಾರೆ.

ಮಾಜಿ ಶಾಸಕ ಎಚ್‌ಎಸ್‌ ಪ್ರಕಾಶ್‌ ಪುತ್ರ ಸ್ವರೂಪ್‌ ಪ್ರಕಾಶ್‌ ಅವರಿಗೆ ಹೆಚ್‌ಡಿ ರೇವಣ್ಣ ಅವರು ಹಾಸನ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ ನೀಡುವ ಭರವಸೆ ನೀಡಿದ್ದರು, ಆದರೆ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳ ಹಿಂದೆ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಸ್ವರೂಪ್‌  ಪ್ರಕಾಶ್‌ ಬೆಂಬಲಿಗರು ಅವಮಾನ ಮಾಡಿದ ಘಟನೆಯ ನಂತರ ಎಚ್‌ಡಿ ರೇವಣ್ಣ ಕೂಡ ಸ್ವರೂಪ್‌ ಪ್ರಕಾಶ್‌ ಅವರನ್ನು ನಿರ್ಲಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com