
ಯಡಿಯೂರಪ್ಪ
ಬೆಂಗಳೂರು: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಸಾಮೂಹಿಕ ಪ್ರಯತ್ನ ನಡೆಸಲಿದ್ದೇವೆ, ಬಜೆಟ್ ಅಧಿವೇಶನದ ನಂತರ ರಾಜ್ಯ ಪ್ರವಾಸ ಕೈಗೊಳ್ಳುವೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿಕಾರ ಇಲ್ಲದೆ ಇದ್ದರೂ ಸುಮಾರು 3000 ಜನ ಬಂದು ಆಶೀರ್ವಾದ ಮಾಡಿದ್ದಾರೆ. ಬಜೆಟ್ ಅಧಿವೇಶನದ ನಂತರ ಮತ್ತೊಮ್ಮೆ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಕಾಂಗ್ರೆನ್‌ನವರ ಯಾವುದೇ ಬೂಟಾಟಿಕೆ ನಡೆಯೋದಿಲ್ಲ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಶಕ್ತಿಮೀರಿ ಕೆಲಸ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ: ಕೋವಿಡ್ ಸಂಕಷ್ಟ ಹಿನ್ನೆಲೆ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ: ಮಾಜಿ ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಪ್ರವಾಸ ಮಾಡಿ ಮತ್ತೊಮ್ಮೆ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಲು ನಾವೆಲ್ಲ ಶಕ್ತಿ ಮೀರಿ ಸಾಮೂಹಿಕ ಪ್ರಯತ್ನ ಮಾಡಲಿದ್ದೇವೆ. ಜನ ನಿಶ್ಚಿತವಾಗಿ ನಮಗೆ ಆಶೀರ್ವಾದ ಮಾಡಲಿದ್ದಾರೆ ಎನ್ನುವ ಭರವಸೆ ಇದೆ. ವಿಧಾನ ಮಂಡಲ ಅಧಿವೇಶನ ಆದ ನಂತರ ಪ್ರವಾಸ ಆರಂಭಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಈ ಹಿಂದೆ ಯಡಿಯೂರಪ್ಪ ಅವರು ಇದೇ ರೀತಿಯ ಘೋಷಣೆಗಳನ್ನು ಮಾಡಿದ್ದರು, ಆದರೆ ಅವರ ರಾಜ್ಯ ಪ್ರವಾಸ ಕೈಗೊಳ್ಳಲು ಪಕ್ಷದ ವರಿಷ್ಠರಿಂದ ಅನುಮತಿ ಪಡೆಯಲು ಸಾಧ್ಯವಾಗಲಿಲ್ಲ . ಈ ಬಾರಿಯೂ ಅವರು ರಾಜ್ಯ ಪ್ರವಾಸ ಕೈಗೊಳ್ಳುವ ಬಗ್ಗೆ ಪಕ್ಷದ ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಮಾರ್ಚ್ 4 ನೇ ತಾರೀಖಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಮಾರ್ಚ್ 30ಕ್ಕೆ ಅಂತ್ಯವಾಗಲಿದೆ.