ಬಿಜೆಪಿ, ಜೆಡಿಎಸ್ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಸೇರಲು ಕಾಯುತ್ತಿದ್ದಾರೆ: ಸಿದ್ದರಾಮಯ್ಯ
ಬಿಜೆಪಿ ಮತ್ತು ಜೆಡಿಎಸ್ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಕಾದು ಕುಳಿತಿದ್ದು, 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
Published: 22nd January 2022 08:08 AM | Last Updated: 22nd January 2022 01:12 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಕಾದು ಕುಳಿತಿದ್ದು, 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಮಾಜಿ ವಿಧಾನಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜು ಅವರು ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಧ್ವಜ ನೀಡಿ ಕಾಂತರಾಜು ರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಜೆಡಿಎಸ್ ಹಾಗೂ ಬಿಜೆಪಿಯ ಹಲವು ನಾಯಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ಅವರು ಪಕ್ಷದ ಟಿಕೆಟ್ ನಿರೀಕ್ಷೆ ಮಾಡದೆ ಬೇಷರತ್ತಾಗಿ ಸೇರಬೇಕು, ನಮ್ಮ ಸಾಲಿಗೆ ಕಟ್ಟುಬಿದ್ದು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರಬೇಕು. ರಾಜ್ಯದ ಜನತೆ 2013-2018ರ ಅವಧಿಯಂತೆ ಮತ್ತೆ ಉತ್ತಮ ಆಡಳಿತವನ್ನು ಮರುಸ್ಥಾಪಿಸಲು ಬಯಸಿದ್ದಾರೆ. ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಮಾತನಾಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯುವುದು ಶೇ.120ರಷ್ಟು ಖಚಿತ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಟಿಪ್ಪು ಸುಲ್ತಾನ್ ಕುರಿತ ಗ್ರಂಥ ರಚಿಸಿದ್ದು ಬಿಜೆಪಿ ಸರ್ಕಾರ: ಸಿದ್ದರಾಮಯ್ಯ
ಮೇಕೆದಾಟು ಯೋಜನೆ ಜಾರಿ ವಿಳಂಬಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಗುರಿಯಾಗಿಸಿ ಮಾತನಾಡಿದ ಅವರು, ಎರಡೂವರೆ ವರ್ಷಗಳಲ್ಲಿ ಬಿಜೆಪಿ ಸರ್ಕಾರ ಕಾನೂನು ತೊಡಕುಗಳನ್ನು ನಿವಾರಿಸಲು ಏನು ಮಾಡಿದೆ ಎಂದು ಪ್ರಶ್ನಿಸಿದರು.
ನಾನು ಈ ವಿಚಾರವನ್ನು ಪ್ರಸ್ತಾಪಿಸಿದ ನಂತರ ಬಿಜೆಪಿ ಸರ್ಕಾರ ಇತ್ತೀಚೆಗೆ ಬಡವರಿಗೆ ಐದು ಲಕ್ಷ ಮನೆಗಳನ್ನು ಘೋಷಿಸಿದೆ, ಮಾರ್ಚ್ 2022 ರೊಳಗೆ ಫಲಾನುಭವಿಗಳಿಗೆ ಅದನ್ನು ವಿತರಿಸುತ್ತದೆಯೇ ಎಂಬುದರ ಬಗ್ಗೆ ನನಗೆ ಅನುಮಾನವಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸೇರಲು ಬಯಸುವವರು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ಸ್ಥಳೀಯ ನಾಯಕತ್ವಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಕೆಪಿಸಿಸಿ ಮುಖ್ಯಸ್ಥ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಬಳಿಕ ಮಾತನಾಡಿದ ಕಾಂತರಾಜು ಅವರು, ಜಾತ್ಯತೀತ ಸಿದ್ಧಾಂತ ವಿಚಾರದಲ್ಲಿ ವಿಫಲವಾದ ಕಾರಣ ಜೆಡಿಎಸ್ ತೊರೆದಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಕರ್ತವ್ಯ ನಿರ್ವಹಿಸುವುದರಲ್ಲಿ ಪೊಲೀಸರು ವಿಫಲ, ಸಿಎಂ ರಾಜೀನಾಮೆ ನೀಡಲಿ: ಕಾಂಗ್ರೆಸ್ ವಕ್ತಾರ ಹೆಚ್.ಎ. ವೆಂಕಟೇಶ್ ಆಗ್ರಹ
ಹೆಚ್.ಡಿ.ದೇವೇಗೌಡರನ್ನು ಹೊರತು ಪಡಿಸಿ ಯಾರಿಗೂ ಸಿದ್ಧಾಂತದ ಬದ್ಧತೆ ಇರಲಿಲ್ಲ, ಹಾಗಾಗಿ ನನ್ನ ರಾಜಕೀಯ ಜೀವನವನ್ನು ಮುಂದಕ್ಕೆ ಕೊಂಡೊಯ್ಯಲು ನಾನು ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದ್ದೇನೆ, 2023 ರ ವಿಧಾನಸಭಾ ಚುನಾವಣೆಯಲ್ಲಿ ತುರುವೇಕೆರೆ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ನನಗಿದೆ ಎಂದು ತಿಳಿಸಿದ್ದಾರೆ.
ಪರಮೇಶ್ವರ ಮಾತನಾಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ 11 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಬೇಕು ಎಂದು ಹೇಳಿದರು.
ಈ ವೇಳೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಪಕ್ಷವು ಕನಿಷ್ಠ 8-9 ಸ್ಥಾನಗಳನ್ನು ಗೆಲ್ಲಬೇಕು ಎಂದರು. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರೂ ಎಲ್ಲಾ 11 ಸ್ಥಾನಗಳನ್ನು ಗೆಲ್ಲಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ ಪ್ರಸಂಗ ನಡೆಯಿತು.