ಪಿಎಸ್ ಐ ನೇಮಕಾತಿ ಹಗರಣ: ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರ ಹೊರಗೆ ಬೀಳುತ್ತಿವೆ; ಸಿದ್ದರಾಮಯ್ಯ, ರಾಹುಲ್ ವಾಗ್ದಾಳಿ

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.  
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.  

ಈ ಕುರಿತಾಗಿ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ ಎಂದಿದ್ದಾರೆ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಪಿಎಸ್ ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇನ್ನೂ ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ (ನೇಮಕಾತಿ) ಅಮೃತ್ ಪೌಲ್ ಬಂಧನದ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣದ ಕುರಿತಾಗಿ ಸದನವನ್ನು ದಾರಿ ತಪ್ಪಿಸಿದ ಗೃಹ ಸಚಿವರು‌ ಕೂಡಲೇ ರಾಜೀನಾಮೆ ಕೊಡಬೇಕು‌. ಈಗ‌ ಅನೇಕರು ಜೈಲಲ್ಲಿ ಕೊಳೆಯುತ್ತಿದ್ದಾರೆ ಎಂದರು. ಪಿಎಸ್ಐ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿದೆ ಎಂದು ಗೃಹ ಸಚಿವರು ಹೇಳಿದ್ದರು. ಆದರೆ, ಇದೀಗ ಈ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮ್ರಿತ್‌ ಪೌಲ್ ಬಂಧನವಾಗಿದ್ದು, ಅಕ್ರಮ ನಡೆದಿರುವುದನ್ನು ಗೃಹ ಸಚಿವರೇ ಒಪ್ಪಿಕೊಂಡಿದ್ದಾರೆ’ ಎಂದರು.

‘ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿ ಮಾಗಡಿಯ ಅಭ್ಯರ್ಥಿಯನ್ನು ವಿಚಾರಣೆ ಮಾಡದಂತೆ ಯಾರು ಬೆಂಬಲವಾಗಿ ನಿಂತರು, ಆ ಅಭ್ಯರ್ಥಿಯನ್ನು ಬಿಟ್ಟು ಕಳುಹಿಸಿದ್ದು ಯಾಕೆ? ನಂತರ 20 ದಿನ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿ ಮತ್ತೆ ಆತನನ್ನು ವಿಚಾರಣೆಗೆ ಕರೆತಂದದ್ದು, ಅದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದು ಬಹಿರಂಗವಾಗಬೇಕು’ ಎಂದೂ ಆಗ್ರಹಿಸಿದರು.

ಬಾಳೆ‌ಹಣ್ಣು ಸಿಕ್ತು ಅಂತಾ ತಿಂದವರನ್ನು ಹಿಡಿದಿದ್ದೀರಿ. ಬಾಳೆ‌ಗಿಡ‌ ನೆಟ್ಟವರನ್ನು ಬಿಟ್ಟಿದ್ದೀರಿ. ಸಿಐಡಿ‌ ಬಗ್ಗೆ ಕೋರ್ಟ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಕೆಲ ಹಿರಿಯ ಅಧಿಕಾರಿಗಳು ಹಾಜರಾಗಿ ವರದಿ ಸಲ್ಲಿಸುವಂತೆ ಸೂಚಿಸಿದೆ.ಕೇವಲ ಪಿಎಸ್ಐ ಅಕ್ರಮ‌ ನೇಮಕಾತಿ ಮಾತ್ರವಲ್ಲ. ಎಲ್ಲಾ‌ ಇಲಾಖೆಯಲ್ಲಿಯೂ ಅಕ್ರಮ ಆಗಿದೆ ಎಂದು ಆರೋಪಿಸಿದರು.

ಇದೇ ವೇಳೆ, ನ್ಯಾಯಯುತ ತನಿಖೆಗಾಗಿ ಆಗ ಗೃಹ ಸಚಿವರಾಗಿದ್ದ ಸಿಎಂ ಅವರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ''ಬಿಜೆಪಿಯ ಭೀಕರ ಭ್ರಷ್ಟಾಚಾರ ಮತ್ತು ಉದ್ಯೋಗ ಮಾರಾಟ ಕರ್ನಾಟಕದ ಸಾವಿರಾರು ಯುವಕರ ಕನಸುಗಳನ್ನು ನಾಶ ಮಾಡಿದೆ. ಪ್ರಧಾನಿ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ? ಇದು ಬಿಜೆಪಿ ಸರ್ಕಾರದ "ಸಬ್ ಖೇಂಗೆ, ಸಬ್ಕೋ ಖಿಲಾಂಗೆ" ಕ್ಷಣವೇ?’’ ಎಂದು ಟೀಕಿಸಿದ್ದಾರೆ.

ರಾಜ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಷ್ಟು ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಬಂಧನವಾಗಿದೆ. ಪಿಎಸ್‌ಐ ನೇಮಕದಲ್ಲಿ ಅಕ್ರಮವೇ ನಡೆದಿಲ್ಲ ಎಂದು ಸದನವನ್ನು ತಪ್ಪು ದಾರಿಗೆಳೆದ ಅಂದಿನ‌ ಗೃಹ ಸಚಿವರು ಇಂದು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಆಗ್ರಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com