ಪಿಎಸ್‌ಐ ಹಗರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸಲು ಅಮೃತ್ ಪೌಲ್ ಸಿದ್ಧ, ಆದರೆ..!: ಡಿಕೆ ಶಿವಕುಮಾರ್
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ.
Published: 07th July 2022 08:56 AM | Last Updated: 07th July 2022 01:06 PM | A+A A-

ಡಿಕೆ ಶಿವಕುಮಾರ್
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಹೈಕೋರ್ಟ್ ನ್ಯಾಯಾಧೀಶರು ಏನು ಹೇಳಿದ್ದಾರೆ? ಎಂದು ಎಲ್ಲರೂ ನೋಡಿದ್ದಾರೆ. ಪಿಎಸ್ಐ ಹಗರಣದಲ್ಲಿ ರಾಜ್ಯದ ಐಪಿಎಸ್ ಅಧಿಕಾರಿಗಳು, ರಾಜಕಾರಣಿಗಳು, ಮಂತ್ರಿಗಳು ಭಾಗಿಯಾಗಿದ್ದಾರೆ" ಎಂದರು. "ಸಚಿವರೇ ನಮ್ಮ ಜಿಲ್ಲೆಯ ಅಭ್ಯರ್ಥಿಗಳಿಗೆ ಶರಣಾಗುವಂತೆ ಹೇಳಿದ್ದಾರೆ. ಇದುವರೆಗೂ 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು, ಅವರ ಹೇಳಿಕೆ, ಬಂಧನವಾಗಿರುವ ಎಡಿಜಿಪಿ ಅವರ ಹೇಳಿಕೆಯನ್ನು ಪೂರ್ಣಪ್ರಮಾಣದಲ್ಲಿ ತನಿಖಾಧಿಕಾರಿಗಳು ದಾಖಲೆ ಮಾಡಿಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕರ್ನಾಟಕ ಭ್ರಷ್ಟಾಚಾರ ರಾಜಧಾನಿಯಾಗಿದೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ಐಎಎಸ್ ಅಧಿಕಾರಿ ಮಂಜುನಾಥ್, ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸೇವೆಯಿಂದ ಅಮಾನತು
ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿರುವ ಕುರಿತು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿರುವ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಈ ದೇಶದಲ್ಲಿ ನ್ಯಾಯಾಂಗವನ್ನು ರಕ್ಷಿಸಬೇಕು ಎಂದು ಅವರು ಸರಿಯಾಗಿ ಹೇಳಿದ್ದಾರೆ. ಮುಕ್ತ ತನಿಖೆಯಾಗಬೇಕು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಸರ್ಕಾರ ಸಂಪೂರ್ಣವಾಗಿ ಹಗರಣಗಳಲ್ಲಿ ಭಾಗಿಯಾಗಿದೆ ಎಂಬುದು ಅವರಿಗೂ ತಿಳಿದಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.