ಪಿಎಸ್ಐ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪೌಲ್ ರನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಸಿದ್ದರಾಮಯ್ಯ ಆಗ್ರಹ

ಪಿಎಸ್ಐ ನೇಮಕಾತಿ ಹಗರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಬಂಧಿತ ಎಡಿಜಿಪಿ ಅಮೃತ್ ಪೌಲ್ ಹಾಗೂ ಇತರ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಬಂಧಿತ ಎಡಿಜಿಪಿ ಅಮೃತ್ ಪೌಲ್ ಹಾಗೂ ಇತರ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಗ್ರಹಿಸಿದ್ದಾರೆ.

ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಹಲವು ಸಚಿವರು ಮತ್ತು ಅವರ ಆಪ್ತರು ಶಾಮೀಲಾಗಿರುವ ಶಂಕೆ ಇದೆ. ಸತ್ಯವನ್ನು ಹೊರತರಲು, ಪೊಲೀಸ್ ನೇಮಕಾತಿ ವಿಭಾಗದ ಮಾಜಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಅಗತ್ಯ ಇದೆ ಎಂದರು. ಅಲ್ಲದೆ ಅಮೃತ್ ಪೌಲ್ ಬರೆದಿರುವ ಡೈರಿಯ ಬಗ್ಗೆಯೂ ವಿವರವಾದ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದರು.

ಇನ್ನೂ ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮೃತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. “ಉಪ್ಪು ತಿಂದವರು ನೀರು ಕುಡಿಯಲಿ” ಎಂದಿದ್ದಾರೆ.

ಪಿಎಸ್‌ಐ ನೇಮಕಾತಿ ‘ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು & ಅಮ್ರಿತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಸರಕಾರವನ್ನು ಒತ್ತಾಯಿಸುವುದಾಗಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮಳೆ ಹಾನಿ ಕುರಿತು ಮಾತನಾಡಿದ ಸಿದ್ದರಾಮಯ್ಯ, ಮುಂಜಾಗ್ರತಾ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ವಿವಿಧ ರಾಜ್ಯಗಳ ಜಿಲ್ಲಾ ಉಸ್ತುವಾರಿ ಸಚಿವರು ತಮಗೆ ಹಂಚಿಕೆಯಾದ ಜಿಲ್ಲೆಗಳಿಗೆ ಭೇಟಿ ನೀಡದೆ ನಿರ್ಲಕ್ಷಿಸಿದ್ದಾರೆ. ಮುಖ್ಯಮಂತ್ರಿಗಳು ಮಳೆ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ಭೇಟಿ ನೀಡಲು ಆರಂಭಿಸಿದ್ದಾರೆ ಎಂದು ಟೀಕಿಸಿದರು.

ಪ್ರವಾಹ ಪೀಡಿತರಿಗೆ ಪರಿಹಾರ ನೀಡುವುದು ಸರ್ಕಾರದ ಆದ್ಯತೆಯಾಗಿದೆ. 2019ರ ಪ್ರವಾಹದಲ್ಲಿ ಮನೆ ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಇದುವರೆಗೂ ಮನೆ ನಿರ್ಮಿಸಿಕೊಟ್ಟಿಲ್ಲ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com