ಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

ಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. 

ಸಂಪುಟ ವಿಸ್ತರಣೆ ಕುರಿತು ಈಗಾಗಲೇ ಮಾತನಾಡಿದ್ದೇನೆ. ವರಿಷ್ಠರು ಗುಜರಾತ್ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣೆ ಮುಗಿದ ನಂತರ ಸಂಪುಟ ವಿಸ್ತರಣೆ ಕುರಿತ ಚರ್ಚೆಗೆ ನನ್ನನ್ನು ದೆಹಲಿಗೆ ಕರೆಯುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಬೊಮ್ಮಾಯಿ ಉತ್ತರಿಸಿದರು. ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆಗಾಗಿ ಶೀಘ್ರದಲ್ಲಿಯೇ ನವದೆಹಲಿಗೆ ತೆರಳುವುದಾಗಿ ಸಿಎಂ ಇತ್ತೀಚಿಗೆ ಹೇಳಿದ್ದರು. 

ಮುಂದಿನ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲು ಸಂಪುಟ ವಿಸ್ತರಣೆ, ಪುನರ್ ರಚನೆ ಬಗ್ಗೆ ಆಕಾಂಕ್ಷಿಗಳು ಸಿಎಂ ಮೇಲೆ ಒತ್ತಡ ಹೇರುತ್ತಲೇ ಬಂದಿದ್ದಾರೆ. ಖಾಲಿಯಿರುವ ಆರು ಖಾತೆಗಳ ಭರ್ತಿಗೆ ಸಂಪುಟ ವಿಸ್ತರಣೆ ಅಥವಾ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲು ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿರುವುದಾಗಿ ಕೆಲವು ವರದಿಗಳು ಹೇಳಿವೆ.

ಗುಜರಾತಿನಂತೆಯೇ ರಾಜ್ಯದಲ್ಲಿಯೂ ಖಾತೆಗಳಲ್ಲಿ ಸಂಪೂರ್ಣವಾಗಿ ಬದಲಾವಣೆಯಾಗಬಹುದು ಎಂಬಂತಹ ಮಾತುಗಳು ಕೇಳಿಬರುತ್ತಿದೆ.  ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಇದು ತುಂಬಾ ತಡವಾಗಿದೆ ಎಂದು ಅನೇಕ ಆಕಾಂಕ್ಷಿಗಳು ಭಾವಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com