ಜೆಡಿಎಸ್ 'ಯುವರಾಜ'ನಿಗಾಗಿ ಡಿ.ಸಿ ತಮ್ಮಣ್ಣ 'ತಲೆದಂಡ': ಮದ್ದೂರು ಕ್ಷೇತ್ರದಲ್ಲಿ ನಿಖಿಲ್ ವಿರುದ್ಧ ಅಭಿಷೇಕ್ ಸ್ಪರ್ಧೆ? ಮಂಡ್ಯ ರಾಜಕಾರಣದಲ್ಲಿ ಕೋಲಾಹಲ!

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪುತ್ರ ನಿಖಿಲ್ ಸ್ಪರ್ಧಿಸಲಿದ್ದಾರೆ ಎಂದು ಇತ್ತೀಚೆಗಷ್ಟೇ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದರು. ಆದರೆ ಯಾವ ಕ್ಷೇತ್ರದಿಂದ ನಿಖಿಲ್ ಕಣಕ್ಕಿಳಿಯಲಿದ್ದಾರೆ ಎಂಬ ವಿಷಯವನ್ನು ಬಹಿರಂಗಗೊಳಿಸಿರಲಿಲ್ಲ.
ನಿಖಿಲ್, ತಮ್ಮಣ್ಣ ಮತ್ತು ಅಭಿಷೇಕ್
ನಿಖಿಲ್, ತಮ್ಮಣ್ಣ ಮತ್ತು ಅಭಿಷೇಕ್

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪುತ್ರ ನಿಖಿಲ್ ಸ್ಪರ್ಧಿಸಲಿದ್ದಾರೆ ಎಂದು ಇತ್ತೀಚೆಗಷ್ಟೇ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದರು. ಆದರೆ ಯಾವ ಕ್ಷೇತ್ರದಿಂದ ನಿಖಿಲ್ ಕಣಕ್ಕಿಳಿಯಲಿದ್ದಾರೆ ಎಂಬ ವಿಷಯವನ್ನು ಬಹಿರಂಗಗೊಳಿಸಿರಲಿಲ್ಲ.

ಆದರೆ ಇತ್ತೀಚಿನ ಬೆಳವಣಿಗೆಗಳ ಪ್ರಕಾರ ನಿಖಿಲ್ ಮದ್ದೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಎಚ್ ಡಿ ದೇವೇಗೌಡರ ಮಗ ಡಾ. ರಮೇಶ್ ಅವರ ಮಾವ, ಮಾಜಿ ಸಚಿವ ಡಿ.ಸಿ ತಮ್ಮಣ್ಣ ನಿಖಿಲ್ ಗಾಗಿ ಕ್ಷೇತ್ರ ತ್ಯಾಗ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಲು ತಮ್ಮಣ್ಣ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ತಿಳಿದು ಬಂದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ವಿರುದ್ಧ ಸೋತಿದ್ದ ನಿಖಿಲ್ 2024 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳಲು ಬಯಸಿದ್ದರು, ಆದರೆ ಗೌಡರ ಕುಟುಂಬ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ನಿಖಿಲ್ ಗೆ ಸೂಚಿಸಿದೆ ಎನ್ನಲಾಗಿದೆ.

ರಾಮನಗರ, ಚನ್ನಪಟ್ಟಣ, ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದಾರೆ.  ರಾಮನಗರದಿಂದ ಅನಿತಾ ಕುಮಾರಸ್ವಾಮಿ ಮತ್ತು ಚನ್ನಪಟ್ಟಣದಿಂದ ಕುಮಾರಸ್ವಾಮಿ  ಶಾಸಕರಾಗಿ ಆಯ್ಕೆಯಾಗಿದ್ದರು.

ಗೌಡರ ಕುಟುಂಬದ ಈ ನಿರ್ಧಾರದಿಂದ ಜೆಡಿಎಸ್ ಬಲಿಷ್ಠವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ನಿಖಿಲ್ ಮದ್ದೂರಿನಿಂದ ಸ್ಪರ್ಧಿಸಿದರೆ,  ದಿವಂಗತ ನಟ ಅಂಬರೀಶ್ ಅವರ ಜನ್ಮಸ್ಥಳ ದೊಡ್ಡರಸಿನಕೆರೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗುವ ಸಾಧ್ಯತೆಯಿದೆ. ಹಾಗೂ ಸುಮಲತಾ ಅವರ ಪುತ್ರ ಅಭಿಷೇಕ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದಿರುವ ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಸುಮಲತಾ ಅವರಿಗೆ ಕಾಂಗ್ರೆಸ್‌ ಸೇರುವಂತೆ ಸಲಹೆ ನೀಡಲಿದ್ದಾರೆ. ನಿಖಿಲ್ ಅವರನ್ನು ಸೋಲಿಸಲು ಸಿದ್ದರಾಮಯ್ಯ ಅಭಿಷೇಕ್ ಅವರನ್ನು ಬೆಂಬಲಿಸುತ್ತಾರೆಯೇ ಎಂಬ ಕುತೂಹಲ ಮೂಡಿದೆ. ಆದರೆ ಅಭಿಷೇಕ್ ಮಂಡ್ಯದಿಂದ ಸ್ಪರ್ಧಿಸಬಹುದು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

ಇತ್ತೀಚೆಗಷ್ಟೇ ರಾಮನಗರದ ಸೀಟನ್ನು ಅನಿತಾ ನಿಖಿಲ್‌ಗೆ ಬಿಟ್ಟುಕೊಡುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಜೆಡಿಎಸ್‌ಗೆ ಸಾಕಷ್ಟು ಶಾಸಕರ ಅಗತ್ಯವಿದ್ದು, ರಾಜಕೀಯವಾಗಿ ಸಕ್ರಿಯವಾಗಿರುವ ಕ್ಷೇತ್ರದಲ್ಲಿ ಕುಟುಂಬದವರೆಲ್ಲರೂ ಚುನಾವಣೆ ಎದುರಿಸಿದರೆ ಮಾತ್ರ ಸಾಧ್ಯ ಎಂದು ಮನವರಿಕೆಯಾಗಿದೆ.  ಹೀಗಾಗಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಕೂಡ ಹಾಸನ ಜಿಲ್ಲೆಯ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com