ಕಾಂಗ್ರೆಸ್‌ 2ನೇ ಪಟ್ಟಿ; ಅಭ್ಯರ್ಥಿಗಳ ಆಯ್ಕೆಗೆ ನಾಳೆ ದೆಹಲಿಯಲ್ಲಿ ಸಿಇಸಿ ಸಭೆ

ವಿಧಾನಸಭಾ ಚುನಾವಣೆಯ ಪಕ್ಷದ 2ನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಧಾನಸಭಾ ಚುನಾವಣೆಯ ಪಕ್ಷದ 2ನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಲಿದೆ.

ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, 2ನೇ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದೆ. ಏಪ್ರಿಲ್ 9ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೋಲಾರಕ್ಕೆ ಭೇಟಿ ನೀಡುತ್ತಿದ್ದು, ಇದಕ್ಕೂ ಮುನ್ನವೇ ಪಟ್ಟಿ ಬಿಡುಗಡೆ ಮಾಡಲು ರಾಜ್ಯ ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ.

ಇಂದು ಸಂಜೆಯೇ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಮೊಕ್ಕಾಂ ಹೂಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಭೆಯಲ್ಲಿ ಸಿದ್ದರಾಮಯ್ಯನವರು ಎರಡನೇ ಕ್ಷೇತ್ರ ಕೋಲಾರದಿಂದ ಸ್ಪರ್ಧಿಸುವ ವಿಚಾರ, ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರುವ ವದಂತಿ, ಚನ್ನಪಟ್ಟಣ ಸೇರಿದಂತೆ ಪ್ರಮುಖ ಸ್ಥಾನಗಳ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿವೆ.

ಇದಷ್ಟೇ ಅಲ್ಲದೆ. ಕೆಆರ್ ಪೇಟೆ, ಯಶವಂತಪುರ ಮತ್ತು ಕೆಆರ್ ಪುರಂ ಕ್ಷೇತ್ರಗಳಿಗೆ ಪಕ್ಷವು ತನ್ನ ಅಭ್ಯರ್ಥಿಗಳನ್ನು ನಿರ್ಧರಿಸುವ ಸಾಧ್ಯತೆಯಿದೆ.

ಸಚಿವರಾದ ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಮತ್ತು ಬೈರತಿ ಬಸವರಾಜ್ ಅವರು ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆಂಬ ಮಾತುಗಳು ಕೇಳಿ ಬಂದಿದ್ದು, ಅವರಿಗೆ ಸ್ಥಾನಗಳ ಕಲ್ಪಿಸುವ ಕುರಿತಂತೆಯೂ ನಾಯಕರು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಬೊಮ್ಮಾಯಿ ಸಂಪುಟದ ಕೆಲವು ಸಚಿವರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದರ ಬಗ್ಗ ಎದ್ದಿರುವ ಗುಸುಗುಸುಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಅವರ ಪಕ್ಷವೇ ತೀರ್ಮಾನ ಮಾಡಲಿ. ಸಿದ್ದರಾಮಯ್ಯ ಅವರನ್ನು ಎರಡು ಸ್ಥಾನಗಳಿಂದ ಕಣಕ್ಕಿಳಿಸುವ ಸಾಧ್ಯತೆಗಳಿದ್ದು, ಹೈಕಮಾಂಡ್‌ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದಲ್ಲಿ ಹಲವು ಟಿಕೆಟ್ ಆಕಾಂಕ್ಷಿಗಳಿದ್ದರೂ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.

"ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡದಿರಲು ಇದೇ ಕಾರಣ. ಜೆಡಿಎಸ್‌ನ ಹಲವು ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿರುವುದರಿಂದ ಜೆಡಿಎಸ್‌ಗೂ ಇದೇ ರೀತಿಯ ಸಮಸ್ಯೆ ಇದೆ. ಮೇ 10 ರ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ತಿರಸ್ಕರಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಇಬ್ಬರು ಆಕಾಂಕ್ಷಿಗಳಿರುವ 35 ಸ್ಥಾನಗಳನ್ನು ಹೊರತುಪಡಿಸಿ ಕಾಂಗ್ರೆಸ್ ತನ್ನ 2ನೇ ಪಟ್ಟಿಯನ್ನು ಅಂತಿಮಗೊಳಿಸಿದ್ದು, 65 ಸ್ಥಾನಗಳಿಗೆ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿ ಪುಲಿಕೇಶಿ ನಗರ ಶಾಸಕ ಆರ್‌.ಅಖಂಡ ಶ್ರೀನಿವಾಸ್‌ ಮೂರ್ತಿ ಹೆಸರು ಇಲ್ಲದ ಕಾರಣ, ಎರಡನೇ ಪಟ್ಟಿಯಲ್ಲೂ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಜಮೀರ್ ಅಹಮದ್ ಖಾನ್, ದಿನೇಶ್ ಗುಂಡೂರಾವ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ನಾಯಕರು. ಭಾನುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com