ನವದೆಹಲಿ/ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಬಿಜೆಪಿ ಯಾವ ರೀತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ ಎಂಬ ಕುತೂಹಲ ಬಹಳ ಮಂದಿಗೆ.
ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನಿನ್ನೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದರು. ನಿನ್ನೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸುಮಾರು 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.
ಎರಡು ಭಾಗಗಳಾಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಭೆಯಲ್ಲಿ ಅಭ್ಯರ್ಥಿಗಳ ಕುರಿತು ವಿವರವಾದ ಚರ್ಚೆ ನಡೆಸಿದ್ದೇವೆ. ರಾಷ್ಡ್ರೀಯ ಅಧ್ಯಕ್ಷರ ಒಪ್ಪಿಗೆ ಪಡೆದು ನಾಳೆ ಮೊದಲ ಪಟ್ಟಿ ಪ್ರಕಟಿಸುತ್ತೇವೆ. ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಸುಮಾರು 170ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ ಎಂದು ತಿಳಿಸಿದರು.
ಸುಮಾರು 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಶಿ, ಸಿಎಂ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು, ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಧಾನ್ ಭಾಗಿಯಾಗಿದ್ದರು.
ಇಂದು ಮತ್ತೊಂದು ಸುತ್ತಿನ ಸಭೆ: ನಿನ್ನೆ ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಅಂತಿಮವಾಗಿಲ್ಲ. ಇಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಬಳಿಕ ಪಟ್ಟಿ ಇಂದು ಅಪರಾಹ್ನ ಅಥವಾ ನಾಳೆ ಬೆಳಗ್ಗೆ ಬಿಡುಗಡೆಯಾಗಲಿದೆ.
Advertisement