ಶಾಸಕರ ಕ್ಷೇತ್ರಾಭಿವೃದ್ಧಿಗೆ ಹಣವಿಲ್ಲ, ರಾಜೀವ್ ಗಾಂಧಿ ಕಂಚಿನ ಪ್ರತಿಮೆಗೆ 1.05 ಕೋಟಿ ರೂ. ಅನುದಾನ; ಚರ್ಚೆಗೆ ಗ್ರಾಸ!

1.05 ಕೋಟಿ ರೂ. ವೆಚ್ಚದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ನಿರ್ಮಿಸಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿರುವುದು ಪಕ್ಷದೊಳಗಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್ ಪಕ್ಷದ ಕಚೇರಿ
ಕಾಂಗ್ರೆಸ್ ಪಕ್ಷದ ಕಚೇರಿ

ಬೆಂಗಳೂರು: 1.05 ಕೋಟಿ ರೂ. ವೆಚ್ಚದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ನಿರ್ಮಿಸಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿರುವುದು ಪಕ್ಷದೊಳಗಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಐದು ಖಾತರಿಗಳನ್ನು ಜಾರಿಗೊಳಿಸಲು ಹಣದ ಕೊರತೆಯಿದೆ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಐದು ಚುನಾವಣಾ ಖಾತರಿಗಳ ಅನುಷ್ಠಾನದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ರಾಜ್ಯದಲ್ಲಿ ಈ ವರ್ಷ ಕ್ಷೇತ್ರಾಭಿವೃದ್ಧಿಗೆ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.

ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಶಾಸಕರು ತಾಳ್ಮೆಯಿಂದಿರಬೇಕು. ತಮ್ಮ ಕ್ಷೇತ್ರಗಳ ಅಭಿವೃದ್ಧಿ ಚಟುವಟಿಕೆಗಳಿಗೆ ಹಣ ಕೇಳದಂತೆ ಮನವಿ ಮಾಡಲಾಗಿದೆ. ಬದಲಿಗೆ, ಜನರ ಬಳಿಕೆ ತೆರಳಿ ಕಾಂಗ್ರೆಸ್ ಸರ್ಕಾರದ ಐದು ಖಾತರಿ ಯೋಜನೆಗಳ ಸಮರ್ಪಕ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷದ ಬದ್ಧತೆಯ ಬಗ್ಗೆ ದೇಶಕ್ಕೆ ಸಂದೇಶ ನೀಡುವ ಉದ್ದೇಶ ಹೊಂದಿದ್ದು, ಲೋಕಸಭೆ ಚುನಾವಣೆಗೂ ಮುನ್ನ ಎಲ್ಲ ಐದು ಖಾತರಿ ಯೋಜನೆಗಳನ್ನು ಜಾರಿಗೊಳಿಸುವುದು ಸರ್ಕಾರಕ್ಕೆ ನಿರ್ಣಾಯಕ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಈಮಧ್ಯೆ, ಬಿಬಿಎಂಪಿಯು ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಟೆಂಡರ್‌ಗಾಗಿ ಜುಲೈ 28ರಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದೆ. ಈಗಾಗಲೇ ರಾಜೀವ್ ಗಾಂಧಿ ಪ್ರತಿಮೆಯಿದ್ದು, ಅದರ ಬದಲಿಗೆ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಕಾಂಗ್ರೆಸ್ ಸರ್ಕಾರ ಬಯಸಿದೆ. ಇದಕ್ಕೆ ಇದೀಗ ಪಕ್ಷದೊಳಗೆ ಚರ್ಚೆಗೆ ಕಾರಣವಾಗಿದೆ.

ನಾಡಿನ ಆರಾಧ್ಯ ದೈವವೆಂದೇ ಪರಿಗಣಿಸಲಾಗಿರುವ ಭುವನೇಶ್ವರಿ ದೇವಿಯ ಪ್ರತಿಮೆ ಕಾಮಗಾರಿಯನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದ್ದು, ಇದೀಗ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆಗೆ ಟೆಂಡರ್ ಕರೆದಿದೆ ಎಂದು ಬಿಜೆಪಿ ಆರೋಪಿಸಿದೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಕಚ್ಚಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೈಕಮಾಂಡ್ ಅನ್ನು ಮೆಚ್ಚಿಸುವಲ್ಲಿ ನಾಯಕತ್ವ ತೊಡಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶತಾಯಗತಾಯ ಹೈಕಮಾಂಡ್ ಅನ್ನು ಸಂತೋಷವಾಗಿರಿಸಲು ಬಯಸುತ್ತಾರೆ ಎಂದು ಕಾಂಗ್ರೆಸ್ ಮೂಲಗಳು ಬಹಿರಂಗಪಡಿಸಿವೆ.

ರಾಜ್ಯದಲ್ಲಿ ಎರಡು ತಿಂಗಳ ಆಡಳಿತದ ನಂತರ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಈಗ ಹೊರಬರುತ್ತಿವೆ. ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಸಿಎಂ ಸಿದ್ದರಾಮಯ್ಯ ನಾಯಕತ್ವವನ್ನು ಪ್ರಶ್ನಿಸುವಂತ ಹೇಳಿಕೆಗಳನ್ನು ನೀಡುತ್ತಿರುವುದು ಇದರ ಬಗ್ಗೆ ಸೂಚನೆ ನೀಡಿವೆ.

ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಸ್ಥಳೀಯ ಶಾಸಕರು ನಾವು ಆಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರದ ವಿಷಯ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್‌ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿದ್ದಾರೆ.

ಜನರ ವಿಶ್ವಾಸ, ಭರವಸೆ ಹಾಗೂ ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದರೆ, ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಏಕೆಂದರೆ, ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

10ಕ್ಕೂ ಹೆಚ್ಚು ಶಾಸಕರ ಸಹಿ ಇರುವ ಈ ಪತ್ರವೂ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com