ಖರ್ಗೆ ಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ: ಆರಗ ಜ್ಞಾನೇಂದ್ರ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

ಬಿಜೆಪಿ ನಾಯಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

ಬೆಂಗಳೂರು: ಬಿಜೆಪಿ ನಾಯಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಆರಗ ಜ್ಞಾನೇಂದ್ರ ಅವರು ಕ್ಷಮೆಯಾಚಿಸಬೇಕು ಮತ್ತು ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ಖಂಡಿಸಿ ಆಗಸ್ಟ್ 1 ರಂದು ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಆರಗ ಜ್ಞಾನೇಂದ್ರ ಅವರು ಖರ್ಗೆ ಅವರ ಮೈಬಣ್ಣ ಮತ್ತು ಅವರು ಬಂದ ಪ್ರದೇಶದ ಜನರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಕಸ್ತೂರಿರಂಗನ್ ವರದಿ ಅನುಷ್ಠಾನದ ಕುರಿತು ನೀಡಿರುವ ಹೇಳಿಕೆಗೆ ಖರ್ಗೆಯವರೂ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಗುರಿಯಾಗಿಸಿ ಆರಗ ಜ್ಞಾನೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದರು.

ಆ ಭಾಗದ ಜನರಿಗೆ ಮರ, ಗಿಡಗಳ ಬಗ್ಗೆ ಏನೂ ಗೊತ್ತಿಲ್ಲ. ಅವರು ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನರ ಜೀವನದ ಮೇಲೆ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗಿರುವುದು ನಮ್ಮ ದುರದೃಷ್ಟ. ಬಿಸಿಲಿನ ತಾಪಕ್ಕೆ ಅಲ್ಲಿನ ಜನ ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೆ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ಟೀಕಿಸಿದ್ದರು.

ಆರಗ ಜ್ಞಾನೇಂದ್ರ ಹೇಳಿಕೆ ಖಂಡಿಸಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಜ್ಞಾನೇಂದ್ರ ಅವರ ಹೇಳಿಕೆ ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರದರ್ಶಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜ್ಞಾನೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಬೆಂಗಳೂರಿನಲ್ಲಿ ಪ್ರಥಮ ದರ್ಜೆ ಸೌಲಭ್ಯವಿರುವ ನಿಮ್ಹಾನ್ಸ್ ಇದೆ, ಅಲ್ಲಿಗೆ ಅವರನ್ನು ಕಳುಹಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ತಿರುಗೇಟು ನೀಡಿದರು.

ಮಾಜಿ ಗೃಹ ಸಚಿವರಾಗಿದ್ದ ಜ್ಞಾನೇಂದ್ರ ಅವರು ಈ ರೀತಿಯ ಕೀಳುಮಟ್ಟದ ಹೇಳಿಕೆ ನೀಡಿರುವುದು ಕಲ್ಯಾಣಕರ್ನಾಟಕದವರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಮಾಡಿದ ಅವಮಾನ ಎಂದು ಸಚಿವ ಖಂಡ್ರೆ ಅವರು ಹೇಳಿದ್ದಾರೆ. 

ಅವರು (ಜ್ಞಾನೇಂದ್ರ) ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಬಿಜೆಪಿಗೆ ನೈತಿಕತೆ ಇದ್ದರೆ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು  ಎಂದು ಆಗ್ರಹಿಸಿದರು.

ಆದರೆ, ಈ ವಿಚಾರ ತೀವ್ರ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ ಅವರು, ಖರ್ಗೆ ಅವರ ಬಗ್ಗೆ ಯಾವತ್ತೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ. 

ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ, ಅವರನ್ನು ಟೀಕಿಸುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅವರ ಹಿರಿತನ, ಅನುಭವಕ್ಕೆ ಗೌರವ ಕೊಟ್ಟು ಮಾತನಾಡುತ್ತೇನೆ. ಯಾರ ಭಾವನೆಗಳಿಗೂ ಧಕ್ಕೆ ತರುವುದು ನನ್ನ ಉದ್ದೇಶವಲ್ಲ. ಆದರೆ ಯಾರಿಗಾದರೂ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯಗಳನ್ನು ಘೋಷಿಸುವ ಕುರಿತು ಕಸ್ತೂರಿರಂಗನ್ ಸಮಿತಿಯ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಖಂಡ್ರೆ ಇತ್ತೀಚೆಗೆ ಹೇಳಿದ್ದರು. ಇದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com