ಭ್ರಷ್ಟಾಚಾರ ಸಹಿಸಿಕೊಳ್ಳಲು ಸಾಧ್ಯವಿಲ್ಲ: ರಾಜ್ಯದ ಸಚಿವರಿಗೆ ರಾಹುಲ್‌ ಗಾಂಧಿ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳಿಂದ ಆತಂಕಕ್ಕೊಳಗಾಗಿದ್ದ ಕಾಂಗ್ರೆಸ್ ಹೈಕಮಾಂಡ್ ಬುಧವಾರ ಈ ಸಂಬಂಧ ರಾಜ್ಯ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದೆ.
ರಾಜ್ಯ ನಾಯಕರ ಜೊತೆ ಸಭೆ
ರಾಜ್ಯ ನಾಯಕರ ಜೊತೆ ಸಭೆ

ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳಿಂದ ಆತಂಕಕ್ಕೊಳಗಾಗಿದ್ದ ಕಾಂಗ್ರೆಸ್ ಹೈಕಮಾಂಡ್ ಬುಧವಾರ ಈ ಸಂಬಂಧ ರಾಜ್ಯ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್​ ಹಿರಿಯ ನಾಯಕರ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಕಪ್ಪುಚುಕ್ಕೆ ಬಾರದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಸೂಚಿಸಿದ್ದಾರೆ.

ಪಾರದರ್ಶಕ ಆಡಳಿತ ನೀಡಬೇಕು, ಹೈಕಮಾಂಡ್ ನಿಗಾ ವಹಿಸಲಿದೆ. ಭ್ರಷ್ಟಾಚಾರ ವಿಚಾರದಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡಿದ್ದೇವೆ. ಹೀಗಾಗಿ ಭ್ರಷ್ಟಾಚಾರ ಆರೋಪ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಯಾವುದೇ ಆರೋಪ ಬರಬಾರದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭ್ರಷ್ಟಾಚಾರದ ವಿರುದ್ಧ ಹೋರಾಡುವ ಮೂಲಕ ನಾವು ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಭ್ರಷ್ಟಾಚಾರ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಲ್ಲಾ ಸಚಿವರಿಗೆ ತಿಳಿಸಿ. ಇದು ಕಟ್ಟುನಿಟ್ಟಿನ ಎಚ್ಚರಿಕೆ ಎಂದು  ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಹೇಳಿದರು ಎಂದು ಸಭೆಯಲ್ಲಿ ಭಾಗವಹಿಸಿದ ನಾಯಕರೊಬ್ಬರು ತಿಳಿಸಿದ್ದಾರೆ.

ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಐಸಿಸಿ ಅಧ್ಯಕ್ಷ ಖರ್ಗೆ, ರಾಹುಲ್​ ನೇತೃತ್ವದಲ್ಲಿ 2024ರ ಲೋಕಸಭಾ ಚುನಾವಣೆ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಸಂಬಂಧ ಚರ್ಚೆ ಮಾಡಿದ್ದು, ಜಿಲ್ಲೆಗಳಿಗೆ ಚುನಾವಣಾ ಉಸ್ತುವಾರಿಯಾಗಿ ಸಚಿವರನ್ನು ನೇಮಿಸುತ್ತೇವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ ಎಂದರು.

ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಪ್ರಮುಖವಾಗಿ ಚರ್ಚೆ ಮಾಡಿದ್ದೇವೆ. ಕನಿಷ್ಠ 20 ಸ್ಥಾನ ಗೆಲ್ಲುವುದಾಗಿ ಹೈಕಮಾಂಡ್​ಗೆ ಭರವಸೆ ನೀಡಿದ್ದೇವೆ ಎಂದು ಸಭೆಯ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್​ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com