ಕಮಿಷನ್ ಆರೋಪ: ಲೋಕಾಯುಕ್ತ ತನಿಖೆಗೆ ಬಿಜೆಪಿ ಆಗ್ರಹ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುತ್ತಿಗೆದಾರರಿಂದ ಕಮಿಷನ್ ಪಡೆದ ಆರೋಪದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಬಿಜೆಪಿ ಶುಕ್ರವಾರ ಆಗ್ರಹಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುತ್ತಿಗೆದಾರರಿಂದ ಕಮಿಷನ್ ಪಡೆದ ಆರೋಪದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಬಿಜೆಪಿ ಶುಕ್ರವಾರ ಆಗ್ರಹಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಹಾಗೂ ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು, ಇದು ಪೇ ಸಿಎಂ, ಪೇ ಡಿಸಿಂ, ಪೇ ಚಲುವರಾಯಸ್ವಾಮಿ ಸರ್ಕಾರವಾಗಿದೆ ಎಂದು ಲೇವಡಿ ಮಾಡಿದರು. ಇದೇ ವೇಳೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಟೀಕಿಸಿದರು.

ದೇಶಾದ್ಯಂತ ಕಾಂಗ್ರೆಸ್ ಗೆ ಬೇಕಾದ ಹಣ ಕರ್ನಾಟಕದಲ್ಲಿ ವಸೂಲಿಯಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಹಣ ಬಿಡುಗಡೆಗೆ ಕಮಿಷನ್ ಕೇಳುತ್ತಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಉಪ ಮುಖ್ಯಮಂತ್ರಿ ಡಿಕೆ. ಶಿವಕುಮಾರ್ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ಲೋಕಾಯುಕ್ತ ತನಿಖೆಗೆ ಸರಕಾರ ಆದೇಶಿಸಬೇಕು ಎಂದು ಆಗ್ರಹಿಸಿದರು.

ಬಳಿಕ ಮಾತನಾಡಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಕೆ.ಗೋಪಾಲಯ್ಯ ಅವರು, ಗುತ್ತಿಗೆದಾರರು ಶೇ.40ರಷ್ಟು ಕಮಿಷನ್ ನೀಡಿರುವ ಶಾಸಕರು ಅಥವಾ ಸಚಿವರ ಹೆಸರನ್ನು ನೀಡುವಂತೆ ಒತ್ತಾಯಿಸಿದರು.

ಕೆಂಪಣ್ಣ ಅವರು 24 ಗಂಟೆಯೊಳಗೆ ವಿವರ ನೀಡಬೇಕು ಅಥವಾ ರಾಜ್ಯದ ಜನರ ಬಳಿಕ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಬಳಿಕ ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರ ಕೆ.ಟಿ.ನಾಗರಾಜ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿದರು.

ನಾಗರಾಜ್ ಹಿನ್ನೆಲೆಯನ್ನು ಅವಲೋಕಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮುಖ್ಯ ಎಂಜಿನಿಯರ್ ಆಗಿದ್ದಾಗ ಕರೆದಿದ್ದ 900 ಕೋಟಿ ರೂ.ಗಳ ಟೆಂಡರ್‌ಗಳ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಹೇಳಿದರು. ಅಲ್ಲದೆ, ಗುತ್ತಿಗೆದಾರರಿಗೆ ಬಾಕಿ ಹಣ ನೀಡುವ ವಿಚಾರ ಕುರಿತು ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿಕೊಂಡರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾತನಾಡಿ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಬಳಿಕ ಕೆಂಪಣ್ಣ ಅವರ ಆರೋಪಕ್ಕೆ ತಿರುಗೇಟು ನೀಡಿದ ಅವರು, ಮಾರ್ಚ್‌ನಲ್ಲಿ ಹಣ ಬಿಡುಗಡೆ ಮಾಡಲಾಗಿದೆ ಎಂದರು ಇದೇ ವೇಳೆ ಬಿಜೆಪಿ ನಾಯಕರು ಸೋಮವಾರ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com