I.N.D.I.A ಮೈತ್ರಿಕೂಟ ಬಲಪಡಿಸಲು ತಮಿಳುನಾಡು ರಾಜ್ಯಕ್ಕೆ ನೀರು ಬಿಡುಗಡೆ: ವಿಪಕ್ಷಗಳ ಆರೋಪ

ಡಿಎಂಕೆ ಸಂತೋಷಪಡಿಸಿ, I.N.D.I.A ಮೈತ್ರಿಕೂಟ ಬಲಪಡಿಸಲು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಸರ್ಕಾರಕ್ಕೆ ರೈತರ ಹಿತಾಸಕ್ತಿಗಿಂತಲೂ ರಾಜಕೀಯ ಲಾಭವೇ ಮುಖ್ಯವಾಗಿದೆ ಎಂದು ಪ್ರತಿಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಡಿಎಂಕೆ ಸಂತೋಷಪಡಿಸಿ, I.N.D.I.A ಮೈತ್ರಿಕೂಟ ಬಲಪಡಿಸಲು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಸರ್ಕಾರಕ್ಕೆ ರೈತರ ಹಿತಾಸಕ್ತಿಗಿಂತಲೂ ರಾಜಕೀಯ ಲಾಭವೇ ಮುಖ್ಯವಾಗಿದೆ ಎಂದು ಪ್ರತಿಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯಕ್ಕೆ ಕಾವೇರಿ ನೀರು ಬಿಡಲು ರಾಜಕೀಯ ಹಿತಾಸಕ್ತಿಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ವಿರೋಧ ಪಕ್ಷಗಳು I.N.D.I.A ಮೈತ್ರಿಕೂಟವನ್ನು ರಚಿಸಿದ್ದು, ಡಿಎಂಕೆ ಅದರ ಭಾಗವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಇತಿಹಾಸದಲ್ಲಿ ಯಾವುದೇ ಸರ್ಕಾರ ಕೂಡ ರಾಜ್ಯ ಹಿತಾಸಕ್ತಿ ಕಾಪಾಡವುದಕ್ಕೂ ಮೊದಲು ತಮಿಳುನಾಡಿನ ಬೇಡಿಕೆಗೆ ಮಣಿದಿರಲಿಲ್ಲ. ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಬೆನ್ನಲ್ಲೇ ಮಿತ್ರ ಪಕ್ಷ ಕಾಂಗ್ರೆಸ್ ಕರ್ನಾಟಕದಿಂದ ನೀರು ಬಿಡುಗಡೆ ಮಾಡುತ್ತಿದೆ.  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರೈತರ ಹಿತಾಸಕ್ತಿಗಳನ್ನು ತ್ಯಾಗ ಮಾಡಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ನಿನ್ನೆಯಷ್ಟೇ ಸರಣಿ ಟ್ವೀಟ್ ಮಾಡಿದ್ದ ಜೆಡಿಎಸ್ ನಾಯಕ ಕುಮಾರಸ್ವಾಮಿಯವರೂ ಕೂಡ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದರು.

ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಅಡಿ ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು, ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ. ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ. ಹೀಗಿದ್ದೂ ಕರ್ನಾಟ ಸರ್ಕಾರ ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಎಂದು ಗುಡುಗಿದ್ದರು.

ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕ ಬಾರ ಆಡುತ್ತಿದೆ. ಇದೇನು ಇನ್ನೊಂದು ಗ್ಯಾರಂಟಿನಾ? 2024ರ ಲೋಕಸಭೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಹಸ್ತಪಕ್ಷ ಸರ್ಕಾರ. ತಮಿಳುನಾಡಿಗೆ ಬೆದರಿ ಶರಣಾಗಿದೆ! ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಯಿಂದಲೇ ಹೊರ ನಡೆದ, ರಾಜ್ಯದ ವಿರುದ್ಧ ಸುಪ್ರೀಂ ಕೋರ್ಟ್​ಗೆ ಅರ್ಜಿ ಹಾಕಿದ ರಾಜ್ಯದೆದುರು ದೈನೇಸಿಯಾಗಿ ಮಂಡಿಯೂರಿದ್ದು ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿಪೆಟ್ಟಾಗಿದೆ ಎಂದು ಹೇಳಿದ್ದರು.

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಯವರು, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ? ಎಂದು ತರಾಟೆ ತೆಗೆದುಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com