ಆಪರೇಷನ್ ಹಸ್ತ: ಬೆಂಬಲಿಗರೊಂದಿಗೆ ಆಯನೂರು ಮಂಜುನಾಥ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.  
ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ
ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 'ಆಪರೇಷನ್ ಹಸ್ತ' ಶುರುವಾಗಿದ್ದು, ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಬೈರತಿ ಬಸವರಾಜ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಇದೀಗ ಶಿವಮೊಗ್ಗದ ಹಿರಿಯ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.  

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಧ್ವಜ ಸ್ವೀಕರಿಸುವ ಮೂಲಕ ಪಕ್ಷ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಮುಖಂಡರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಡಿಕೆ ಶಿವಕುಮಾರ್, ಆಯನೂರು ಮಂಜುನಾಥ್ ಅವರ ಮುಂದಿ‌ನ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು. ಕಾಂಗ್ರೆಸ್ ಪಕ್ಷದಲ್ಲಿ ಬೇರೂರಿದರೆ ಸೂಕ್ತ ಸ್ಥಾನಮಾನಗಳು ಸಿಗಲಿವೆ. ಬಂದು ಹೋಗುವ ಪ್ರವೃತ್ತಿ ಮೈಗೂಡಿಸಿಕೊಂಡರೆ ಸಿಗಬೇಕಾದ ಅವಕಾಶಗಳು ತಪ್ಪುತ್ತವೆ, ಅಷ್ಟೇ ಅಲ್ಲ ಜನ ನಿಮ್ಮ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ ಎಂದು ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ರಾಷ್ಟ್ರ ಧ್ವಜದ ಗುರುತು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಇತಿಹಾಸವಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ ಎಂದ ಅವರು, ಪಕ್ಷ ಸೇರ್ಪಡೆಯಾಗುವವರಿಗೆ ಟಿಕೆಟ್ ಭರವಸೆ ನೀಡಿಲ್ಲ ಎಂದರು.

ಆಯನೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com