ತಿರುಚಿದ ವಿಡಿಯೋ: ಸಿಟಿ ರವಿ, ಸಿ.ಎನ್. ಅಶ್ವತ್ಥ ನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಲಿ- ಸಿಎಂ ಸಿದ್ದರಾಮಯ್ಯ ಆಗ್ರಹ

ವಿಧಾನಸಭೆಯಲ್ಲಿ ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ಬೇಕಾದಷ್ಟು ಕಟ್ ಮಾಡಿ  ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರಾದ ಸಿಟಿ ರವಿ ಹಾಗೂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ಬೇಕಾದಷ್ಟು ಕಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರಾದ ಸಿಟಿ ರವಿ ಹಾಗೂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತ ಪೂರ್ತಿ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಸಿಟಿ ರವಿ ಮತ್ತು ಅವರ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ಅವರನ್ನು ಮನೆಯಲ್ಲಿ‌ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ.ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದಿದ್ದಾರೆ. 

ಹಾಲಿ ಶಾಸಕರಾಗಿರುವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತೆ ಎಂದಿರುವ ಮುಖ್ಯಮಂತ್ರಿ, ನಿಮ್ಮ ಮಾನ ಮರ್ಯಾದೆ ಬಗ್ಗೆ ನಿಮಗೆ ಕನಿಷ್ಠ ಕಾಳಜಿ ಇದ್ದರೆ ಶೇರ್ ಮಾಡಿರುವ ವೀಡಿಯೋ ಡಿಲೀಟ್ ಮಾಡಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ. 

ಬಿಜೆಪಿ ನಾಯಕರ ಇಂತಹ ನಡವಳಿಕೆಗಳು ಬಿಜೆಪಿ ಎಂದರೆ "ಬೊಗಳೆ ಜನತಾ ಪಾರ್ಟಿ" ಎಂಬ ಕುಖ್ಯಾತಿಯನ್ನು ದೃಡೀಕರಿಸುವಂತಿದೆ. ಫೇಕ್ ನ್ಯೂಸ್ ಗಳ ಸೃಷ್ಟಿ ಮತ್ತು ಪ್ರಸಾರವನ್ನೇ ನಂಬಿ ರಾಜಕಾರಣ ಮಾಡುವ ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ. ನರೇಂದ್ರ ಮೋದಿ ಅವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ "ಫೇಕ್ ನ್ಯೂಸ್ ಪೆಡ್ಲರ್" ಗಳಾದ ಸಿಟಿ ರವಿ ಮತ್ತು ಅಶ್ವತ್ಥ ನಾರಾಯಣ ಅವರನ್ನು ಪಕ್ಷದಿಂದ ಆಚೆಗಟ್ಟಲಿ ಎಂದು ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ. 

ನಂತರ ಈ ವಿಡಿಯೋಗಳನ್ನು ಡಿಲೀಟ್ ಮಾಡಲಾಗಿದೆ. ಈ ಕುರಿತು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಬಿಜೆಪಿಗರು ಇಂದು ಬೆಳಿಗ್ಗೆಯಿಂದ ಮೂರ್ನಾಲ್ಕು ಸುಳ್ಳುಗಳನ್ನು ಸಾಮಾಜಿಕ ಜಾಲತಾಣಗಳ ಅಧಿಕೃತ ಖಾತೆಗಳಲ್ಲಿ ಹಂಚಿ ಡಿಲೀಟ್ ಮಾಡಿದ್ದಾರೆ. ಇನ್ನು ಅನಧಿಕೃತ ಖಾತೆಗಳಲ್ಲಿ ಸುಳ್ಳಿನ ಹೊಳೆಯನ್ನೇ ಹರಿಸುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com