

ಗದಗ: ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸದ ಸರ್ಕಾರ, ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂದು ನೆಪ ಹೇಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸರಕಾರ ಅವಕಾಶ ನೀಡಿತ್ತು. ಆದರೆ, ಸಿದ್ದರಾಮಯ್ಯ ಅವರು ಅಲ್ಲಿಗೆ ಫ್ಯಾಷನ್ ಶೋಗೆ ಹೋಗಿದ್ದಾರಾ? ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆಂದು ಹೇಳಿದರು.
ಬಿಜೆಪಿ ಯುವಜನತೆ ಮತ್ತು ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಲಿದ್ದು, ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
ಇತ್ತೀಚೆಗೆ, ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಎರಡು ದಿನಗಳ ವಿಶೇಷ ಸಭೆಯಲ್ಲಿ ಭಾಗವಹಿಸಲು ನನಗೆ ಅವಕಾಶ ಸಿಕ್ಕಿತು. ಪಕ್ಷದ ಕಾರ್ಯಕರ್ತರಿಗೆ ಹೇಗೆ ತರಬೇತಿ ನೀಡಬೇಕು ಎಂಬುದನ್ನು ತಿಳಿಸಲಾಯಿತು. ಪ್ರಧಾನಿ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ನಮ್ಮೆಲ್ಲರೊಂದಿಗೆ ಐದು ಗಂಟೆಗಳ ಕಾಲ ಕುಳಿತುಕೊಂಡು, ಮಾತುಕತೆ ನಡೆಸಿದರು ಎಂದು ಹೇಳಿದರು.
ಬಳಿಕ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಜಯೇಂದ್ರ ಅವರು, ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣವನ್ನು ಕಣ್ಣಾರೆ ಕಂಡರೂ ಸಿಎಂ ಅಲ್ಲಿಗೆ ಭೇಟಿ ನೀಡದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.
ಲಿಂಗಾಯತ ವಿಚಾರವಾಗಿ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ನೀಡಿರುವ ಹೇಳಿಕೆ ಕುರಿತು ಮಾತನಾಡಿ, ರಾಜ್ಯದ ದುರಂತವೋ, ನಾಯಕರ ದುರಂತವೋ ಗೊತ್ತಿಲ್ಲ ಮನೆ ಕಟ್ಟುವ ಕೆಲಸ ಮಾಡಬೇಕೇ ಹೊರತು ಮನೆ ಒಡೆಯುವ ಕೆಲಸ ಯಾರಿಂದಲೂ ಆಗಬಾರದು. ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಯಾವ ಮಟ್ಟಕ್ಕಾದರೂ ಕಾಂಗ್ರೆಸ್ ನವರು ಉಳಿಯುತ್ತಾರೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದರು.