2024 ಲೋಕಸಭೆ ಚುನಾವಣೆ: ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದ ಕಾಂಗ್ರೆಸ್

ಮುಂಬರುವ ಲೋಕಸಭೆ ಚುನಾವಣೆ ಅಂಗವಾಗಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಾಗಲೇ ಅಧ್ಯಯನ ನಡೆಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಕಚೇರಿ
ಕಾಂಗ್ರೆಸ್ ಪಕ್ಷದ ಕಚೇರಿ
Updated on

ಉತ್ತರ ಕನ್ನಡ: ಮುಂಬರುವ ಲೋಕಸಭೆ ಚುನಾವಣೆ ಅಂಗವಾಗಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಾಗಲೇ ಅಧ್ಯಯನ ನಡೆಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿ ಯಾರಾದರೆ ಸೂಕ್ತ ಎಂಬ ಬಗ್ಗೆ ಅಧ್ಯಯನ ನಡೆಸಲಾಗುತ್ತಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದು ಕೆಪಿಸಿಸಿಗೆ ವರದಿ ಸಲ್ಲಿಸಲಾಗುವುದು. ಉತ್ತರ ಕನ್ನಡದಿಂದ ಆರು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಚ್‌ಕೆ ಪಾಟೀಲ್ ತಿಳಿಸಿದರು.

ಉತ್ತರ ಕನ್ನಡದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭ್ಯರ್ಥಿಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲಿದ್ದಾರೆ. ಶಿವಕುಮಾರ್ ಅವರು ಈ ಜವಾಬ್ದಾರಿಯನ್ನು ನೀಡಿದ್ದಾರೆ. ಹೀಗಾಗಿ, ಅಂಕೋಲಾದಲ್ಲಿ ಈಗಾಗಲೇ ಸಭೆ ನಡೆಸಿ ಹಲವು ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಿದ್ದೇನೆ ಮತ್ತು ಸಮಾಲೋಚನೆ ನಡೆಸಿದ್ದೇನೆ. ಅದರಂತೆ ಈಗ ಶಿರಸಿಯಲ್ಲೂ ಸಭೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದೇನೆ ಎಂದರು.

ಕರ್ನಾಟಕವು 28 ಲೋಕಸಭಾ ಸ್ಥಾನಗಳನ್ನು ಹೊಂದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಲೋಕಸಭಾ ಸ್ಥಾನವನ್ನು ಗೆದ್ದುಕೊಂಡಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದರು. ಇದೀಗ ರಾಜ್ಯದಲ್ಲಿ ಅಧಿಕಾರದಲ್ಲಿರುವುದರಿಂದ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಕರ್ನಾಟಕದವರಾಗಿರುವುದರಿಂದ ಈ ಬಾರಿ ಫಲಿತಾಂಶ ಸುಧಾರಿಸುವ ನಿರೀಕ್ಷೆಯಿದೆ.

‘ಉತ್ತರ ಕನ್ನಡವು ಪ್ರವಾಸೋದ್ಯಮಕ್ಕೆ ಸೂಕ್ತ ಜಿಲ್ಲೆಯಾಗಿದ್ದು, ಅಭಿವೃದ್ಧಿಯ ಜತೆಗೆ ಜಿಲ್ಲೆಯ ಸಮುದ್ರ ತೀರವನ್ನು ಇತರೆ ರಾಜ್ಯಗಳಂತೆ ಸುಂದರವಾಗಿ ರೂಪಿಸಬೇಕು. ಪ್ರವಾಸೋದ್ಯಮದ ಪ್ರಗತಿಗೆ ಏನೆಲ್ಲಾ ಅಭಿವೃದ್ಧಿ ಪಡಿಸಬೇಕು, ಜನರನ್ನು ಆಕರ್ಷಿಸಲು ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಧ್ಯಯನ ಮಾಡಲು ಉತ್ತರ ಕನ್ನಡ ಪ್ರವಾಸೋದ್ಯಮ ಅಧ್ಯಯನ ಮತ್ತು ಅಭಿವೃದ್ಧಿ ಸಮಿತಿಯನ್ನು ರಚಿಸಲಾಗುವುದು. ಜನವರಿ ಮೊದಲ ವಾರದಲ್ಲಿ ತಜ್ಞರು, ಸ್ಥಳೀಯರನ್ನು ಸೇರಿಸಿ ಸಮಿತಿ ರಚಿಸಲಾಗುವುದು ಎಂದು ಸಚಿವ ಪಾಟೀಲ ಹೇಳಿದರು.

'ಬೆಳಗಾವಿ ಅಧಿವೇಶನದಲ್ಲಿ ನಾವು 17 ಮಸೂದೆಗಳನ್ನು ಅಂಗೀಕರಿಸಿದ್ದೇವೆ. ಅದರಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಮಸೂದೆಯೂ ಸೇರಿದೆ. ಈಗ ನಾವು ಬಾಂಬೆ ಟ್ರಸ್ಟ್ ಕಾಯ್ದೆಯನ್ನು ಪುನರುಜ್ಜೀವನಗೊಳಿಸುತ್ತಿದ್ದೇವೆ. ನಾವು ಕರ್ನಾಟಕ ಹೈಕೋರ್ಟ್, ಸಿವಿಲ್ ಮತ್ತು ನಡವಳಿಕೆ ಸರ್ಕಾರಿ ವ್ಯಾಜ್ಯ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ' ಎಂದು ಸಚಿವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com