ಬಿಜೆಪಿಗೆ ಎ.ಟಿ ರಾಮಸ್ವಾಮಿ ಗುಡ್ ಬೈ? ಕೈ ಹಿಡಿಯಲಿದ್ದಾರಾ ಮಾಜಿ ಶಾಸಕ; ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧೆ?

2024 ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದ ನಂತರ ಎಟಿ ರಾಮಸ್ವಾಮಿ ಬಿಜೆಪಿ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ಎ.ಟಿ ರಾಮಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ
ಎ.ಟಿ ರಾಮಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ

ಹಾಸನ: 2024 ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದ ನಂತರ ಎಟಿ ರಾಮಸ್ವಾಮಿ ಬಿಜೆಪಿ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಪಕ್ಷದ ಹಿರಿಯ ನಾಯಕರ ವರ್ತನೆಯಿಂದ ಬೇಸರಗೊಂಡು ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದಿದ್ದರು, ನಂತರ 2023ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಎಟಿ ರಾಮಸ್ವಾಮಿ ಅವರೊಂದಿಗೆ ಮಾತನಾಡಿ ಕಾಂಗ್ರೆಸ್‌ಗೆ ಆಹ್ವಾನಿಸಿದ್ದಾರೆ, 2024 ರ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಟಿಕೆಟ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಿಟ್ಟಿನಲ್ಲಿ ಸಿಎಂ ಪ್ಲಾನ್ ಗೆ ಎಟಿ ರಾಮಸ್ವಾಮಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಂದು ಜೆಡಿಎಸ್ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಘೋಷಿಸಿದ್ದಾರೆ. ಜೆಡಿಎಸ್- ಬಿಜೆಪಿ ಹೊಂದಾಣಿಕೆ ಅಭ್ಯರ್ಥಿಯಾಗಿರುವ ಪ್ರಜ್ವಲ್  ಸೋಲಿಸುವ ಸಾಮರ್ಥ್ಯ  ಎ ಟಿ ರಾಮಸ್ವಾಮಿ ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಭಾವಿಸಿದೆ.

ಮಾಜಿ ಸಚಿವ ಬಿ.ಶಿವರಾಂ, ರಾಜ್ಯ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಾಗೂರು ಮಂಜೇಗೌಡ, ಹೊಳೆನರಸೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಅಲ್ಪ ಮತಗಳಿಂದ ಸೋತ ಶ್ರೇಯಸ್‌ ಪಟೇಲ್‌, ಮಾಜಿ ಎಂಎಲ್‌ಸಿ ಗೋಪಾಲಸ್ವಾಮಿ ಎಂಪಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದು, ಬೆಂಬಲಿಗರ ಮೂಲಕ ಲಾಬಿ ನಡೆಸುತ್ತಿದ್ದಾರೆ.

ಆದರೆ ಈ ವಿಷಯವನ್ನು ಮಾಜಿ ಶಾಸಕ ಎ.ಟಿ ರಾಮಸ್ವಾಮಿ ತಳ್ಳಿ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಯಾವುದೇ ಹಿರಿಯ ನಾಯಕರು ತಮ್ಮನ್ನು ಕಾಂಗ್ರೆಸ್‌ಗೆ ಆಹ್ವಾನಿಸಿಲ್ಲ ಎಂದು ಎಟಿ ರಾಮಸ್ವಾಮಿ ಹೇಳಿದ್ದಾರೆ.  ಒಂದು ವೇಳೆ ಆಫರ್ ಬಂದರೆ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಎದುರಿಸಲು ಎಟಿ ರಾಮಸ್ವಾಮಿ ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕನ ಮೇಲೆ ಇತ್ತೀಚೆಗೆ ನಡೆದ ಭೂಕಬಳಿಕೆ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಎಟಿ ರಾಮಸ್ವಾಮಿ ವಾಗ್ದಾಳಿ ನಡೆಸಿದ್ದರು. ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯನ್ನು  ರಾಮಸ್ವಾಮಿ ಪ್ರಬಲವಾಗಿ ವಿರೋಧಿಸಿದ್ದಾರೆ, 2024 ರ ಎಂಪಿ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಅವರನ್ನು ಬೆಂಬಲಿಸುವಂತೆ ಸೂಚಿಸಿದ್ದರೂ ಅವರು ಎಂದಿಗೂ ಪ್ರಜ್ವಲ್‌ಗೆ ಬೆಂಬಲ ನೀಡಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com