6673 ಮತದಾರರ ಹೆಸರು ಡಿಲೀಟ್ ಮಾಡಲು ಬಿಜೆಪಿಯಿಂದ ವ್ಯವಸ್ಥಿತ ಸಂಚು; ಕಾಂಗ್ರೆಸ್

ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6673 ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ಡಿಲೀಟ್ ಮಾಡಲು ಬಿಜೆಪಿ ವ್ಯವಸ್ಥಿತ ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6673 ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ಡಿಲೀಟ್ ಮಾಡಲು ಬಿಜೆಪಿ ವ್ಯವಸ್ಥಿತ ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಳಂದ ಕ್ಷೇತ್ರದ ಮಾಜಿ ಶಾಸಕ ಬಿ.ಆರ್.ಪಾಟೀಲ್ ಅವರು, ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ವಿಳಾಸ ಬದಲಾವಣೆಗೆ ಆನ್ ಲೈನ್ ಮೂಲಕ ಮನವಿ ಸಲ್ಲಿಸಲು ಅವಕಾಶವಿದೆ. ಈ ಅವಕಾಶ ಬಳಸಿಕೊಂಡು ಬಿಹಾರ, ಉತ್ತರ ಪ್ರದೇಶ, ಜಾಖರ್ಂಡ್, ರಾಜಸ್ತಾನ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ನಕಲಿ ಮೊಬೈಲ್ ನಂಬರ್ ಬಳಸಿಕೊಂಡು ಮನವಿ ಸಲ್ಲಿಸಲಾಗಿದೆ. ಈಗಾಗಲೇ ಇಂತಹ 30ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ. ಒಂದು ವೇಳೆ, ಈ ನಕಲಿ ಮನವಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿರುವ ಬಿ.ಎಲ್.ಒ.ಗಳು ಪುರಸ್ಕರಿಸಿದ್ದೇ ಆದರೆ, ಒಟ್ಟು 6673 ಮತದಾರರ ಹೆಸರುಗಳು ಡಿಲೀಟ್ ಆಗುವ ಸಾಧ್ಯತೆಗಳಿವೆ. ಈ ಎಲ್ಲ ಮತದಾರರು ನನಗೆ ಆಪ್ತರಾಗಿರುವ ಕಾರಣಕ್ಕೆ ಇಂತಹದ್ದೊಂದು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳಲ್ಲಿ ಹೀಗೆ ಸರ್ಕಾರಿ ಪ್ರಾಯೋಜಿತ ಮತದಾರರ ಹೆಸರು ಡಿಲೀಟ್ ಮಾಡುವ ಸಂಚು ರೂಪಿಸಲಾಗಿದೆ. ಇದೇ ರೀತಿಯ ತಂತ್ರಗಾರಿಕೆಯನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ, ಶಿವಾಜಿ ನಗರ ಕ್ಷೇತ್ರಗಳಲ್ಲಿಯೂ ಚಿಲುಮೆ ಸಂಸ್ಥೆಯ ಮೂಲಕ ರೂಪಿಸಲಾಗಿತ್ತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮೊದಲ ಬಾರಿಗೆ ಓರ್ವ ಐಎಎಸ್ ಅಧಿಕಾರಿ ಅಮಾನತುಗೊಂಡಿದ್ದರು. ಆಳಂದ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಚಿನಲ್ಲಿಯೂ ರಾಜ್ಯ ಸರಕಾರದ ನೇರ ಕೈವಾಡವಿರುವ ಸ್ಪಷ್ಟ ಸಾಧ್ಯತೆಯಿದೆ ಎಂದು ಹೇಳಿದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ ಇಂತಹ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವುದಾದಿ ಪಾಟೀಲ್ ಅವರು ಹೇಳಿದರು.

ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ತಮ್ಮ ಜಿಲ್ಲೆಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆದಿವೆಯೇ ಎಂಬುದನ್ನು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್, ಡಾ.ಕಿರಣ ದೇಶಮುಖ, ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ, ಅಶೋಕ ವೀರನಾಯಕ, ಕಾಂಗ್ರೆಸ್ ಮುಖಂಡ ಸಂತೋಷ್ ಧಣ್ಣೂರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com