
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಭರಪೂರ ಆಶ್ವಾಸನೆಗಳು, ಭರವಸೆಗಳನ್ನು ಘೋಷಿಸಿ ಮತದಾರರನ್ನು ಓಲೈಸಿಕೊಳ್ಳಲು ರಾಜಕೀಯ ಪಕ್ಷಗಳು ಪ್ರಯತ್ನಿಸುವುದು ಸಾಮಾನ್ಯ. ರಾಜ್ಯ ಕಾಂಗ್ರೆಸ್ ಪಕ್ಷ ಈ ಬಾರಿ ಶತಾಯಗತಾಯ ಬಿಜೆಪಿಯನ್ನು ಹಿಂದಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ.
ಈ ಹಿಂದೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಪ್ಕತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2 ಸಾವಿರ ರೂಪಾಯಿಗಳನ್ನು ಅಧಿಕಾರಕ್ಕೆ ಬಂದರೆ ನೀಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಇಂದು ಮತ್ತೆ ಮೂರು ಪ್ರಮುಖ ಘೋಷಣೆಗಳನ್ನು ಮಾಡಿದೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ 3ನೇ ಭರವಸೆ ಅನ್ನಭಾಗ್ಯವನ್ನು ಘೋಷಿಸಿದೆ. ಬಿಪಿಎಲ್ ಕಾರ್ಡು ಹೊಂದಿರುವವರಿಗೆ ತಿಂಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಪ್ರಕಟಿಸಿದೆ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆಗ ಬಿಪಿಎಲ್ ಕುಟುಂಬಗಳಿಗೆ ತಲಾ 7ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು.
ನಂತರ 2019ರಲ್ಲಿ ಬಂದ ಬಿಜೆಪಿ ಸರ್ಕಾರ ಅದನ್ನು 5 ಕೆಜಿಗೆ ಇಳಿಸಿತ್ತು. ಅದಕ್ಕೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ವ್ಯಾಪಕವಾಗಿ ಟೀಕೆ ಮಾಡುತ್ತಾ ಬಂದಿದ್ದಾರೆ. ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ.
Advertisement