

ತುಮಕೂರು: 2018ರ ವಿಧಾನಸಭಾ ಚುನಾವಣೆಗೂ ಮುನ್ನ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಕಲ್ಪಿಸುವ ಮೂಲಕ ವೀರಶೈವ ಲಿಂಗಾಯತ ಸಮುದಾಯವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲಿಂಗಾಯತ ಸಮುದಾಯಕ್ಕೆ ಸೇರಿದ ಕಾರ್ಯಕ್ರಮವೊಂದಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನ ನೀಡಲಾಗಿದೆ.
ಜನವರಿ 14 ಮತ್ತು 15ರಂದು ತಿಪಟೂರಿನಲ್ಲಿ ನಡೆಯಲಿರುವ 12ನೇ ಶತಮಾನದ ಶರಣ ಶ್ರೀ ಸಿದ್ದರಾಮೇಶ್ವರರ 850ನೇ ಜಯಂತಿಗೆ ಸಿದ್ದರಾಮಯ್ಯ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನ ನೀಡಲಾಗಿದ್ದು, ಸಮಾವೇಶದಲ್ಲಿ ಭಾಗಿಯಾಗುವ ಸಿದ್ದರಾಮಯ್ಯ ಅವರು, ಲಿಂಗಾಯತ ಸಮುದಾಯವನ್ನು ಓಲೈಸುವ ಯತ್ನ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮಾವೇಶವನ್ನು ಉದ್ಘಾಟಿಸಲಿದ್ದು, ಸಮಾವೇಳದಲ್ಲಿ ರಾಜ್ಯಾದ್ಯಂತ ಎರಡು ಲಕ್ಷಕ್ಕೂ ಹೆಚ್ಚು ಸಮುದಾಯದವರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಜನವರಿ 15 ರಂದು ಸಿದ್ದರಾಮಯ್ಯ ಅವರು ಸಮುದಾಯದ ಸಾಧಕರಿಗೆ ‘ನೊಳಂಬ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಹೊರತುಪಡಿಸಿ ಎಂಬಿ ಪಾಟೀಲ್, ಈಶ್ವರ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಸಮುದಾಯದ ಕಾಂಗ್ರೆಸ್ ಮುಖಂಡರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.
ನಂತರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳಾದ ಜೆ ಸಿ ಮಾಧುಸ್ವಾಮಿ ಮತ್ತು ಬಿ ಸಿ ನಾಗೇಶ್ ಭಾಗವಹಿಸುವ ನಿರೀಕ್ಷೆ ಇದೆ.
ಸಿದ್ದರಾಮಯ್ಯ ಅವರೊಂದಿಗೆ ಉತ್ತಮ ಒಡನಾಟ ಹೊಂದಿರುವ ತುಮಕೂರು ಲೋಕಸಭಾ ಸದಸ್ಯ ಜಿ ಎಸ್ ಬಸವರಾಜು ಅವರು, ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿದ್ದಾರೆ.