ಚುನಾವಣಾ ರಾಜಕೀಯಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗುಡ್‌ಬೈ: ಕರ್ನಾಟಕದಿಂದಲೇ ರಾಜ್ಯಸಭೆಗೆ?

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಕರ್ನಾಟಕದಲ್ಲಿ ಮುಂದಿನ ಎಂಟು ತಿಂಗಳಲ್ಲಿ ಚುನಾವಣೆ ನಡೆಯಬೇಕಿದೆ. ಈ ಬಾರಿ ಮೇಲ್ಮನೆಗೆ ರಾಜ್ಯದಿಂದ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನಲಾಗುತ್ತಿದೆ. 
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಕರ್ನಾಟಕದಲ್ಲಿ ಮುಂದಿನ ಎಂಟು ತಿಂಗಳಲ್ಲಿ ಚುನಾವಣೆ ನಡೆಯಬೇಕಿದೆ. ಈ ಬಾರಿ ಮೇಲ್ಮನೆಗೆ ರಾಜ್ಯದಿಂದ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನಲಾಗುತ್ತಿದೆ. 

ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸಾಧ್ಯತೆಯಿರುವುದರಿಂದ ಸೋನಿಯಾ ಅವರು ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂಬ ಗುಸುಗುಸು ರಾಜಕೀಯ ವಲಯದಿಂದ ಕೇಳಿಬರುತ್ತಿದೆ.

ಕರ್ನಾಟಕದ ಮೂವರು ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾದ ಸೈಯದ್ ನಾಸೀರ್ ಹುಸೇನ್, ಡಾ. ಎಲ್ ಹನುಮಂತಯ್ಯ ಮತ್ತು ಜಿಸಿ ಚಂದ್ರಶೇಖರ್ ಅವರ ಅವಧಿ ಮುಂದಿನ ವರ್ಷ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. ಹೀಗಾಗಿ, ಈ ಮೂರೂ ಸ್ಥಾನಗಳಿಗೆ ಪುನಃ ತನ್ನ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಮುಂದಾಗಿದೆ. ಅಲ್ಲದೆ, ಇದೀಗ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ತನ್ನ ಎಲ್ಲಾ ಮೂರು ಸ್ಥಾನಗಳನ್ನು ಉಳಿಸಿಕೊಳ್ಳುವ ಅವಕಾಶವಿದೆ.

ದಿವಂಗತ ರಾಜೀವ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಿದ್ದ 1989 ರಿಂದಲೂ ತಾವು ತಂಗಿರುವ 10, ಜನಪಥ್ ನಿವಾಸವನ್ನು ಉಳಿಸಿಕೊಳ್ಳಲು ಸೋನಿಯಾ ಗಾಂಧಿ ಮುಂದಿರುವುದು ಒಂದೇ ಆಯ್ಕೆ. ಅದುವೇ ಅವರು ಸಂಸದೆಯಾಗುವುದು ಇಲ್ಲವೇ ರಾಜ್ಯಸಭೆ ಸದಸ್ಯೆಯಾಗುವುದು ನಿರ್ಣಾಯಕವಾಗಿದೆ.

ಹೀಗಾಗಿ, ಸೋನಿಯಾ ಗಾಂಧಿ ಅವರೊಂದಿಗೆ ಉತ್ತರ ಪ್ರದೇಶ ಮೂಲದ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಮತ್ತು ಕರ್ನಾಟಕದ ಸೈಯದ್ ನಾಸೀರ್ ಹುಸೇನ್ ಅವರನ್ನು ರಾಜ್ಯಸಭೆಗೆ ಮರುನಾಮಕರಣ ಮಾಡಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸೋನಿಯಾ ಅವರನ್ನು ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಪ್ರತಿಪಕ್ಷಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಇತ್ತೀಚೆಗೆ ಸೋನಿಯಾ ಗಾಂಧಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನೆಹರು-ಗಾಂಧಿ ಕುಟುಂಬದ ಯಾವುದೇ ಸದಸ್ಯರು ಸಂಸತ್ತಿನಲ್ಲಿ ಇರದಂತೆ ನೋಡಿಕೊಳ್ಳಲು ಬಿಜೆಪಿ ಯೋಜಿಸುತ್ತಿರುವುದರಿಂದ, ಕಾಂಗ್ರೆಸ್ ಅವರಿಗೆ ಸುರಕ್ಷಿತ ಮಾರ್ಗಗಳನ್ನು ಒದಗಿಸಲು ಯೋಜನೆ ರೂಪಿಸುತ್ತಿದೆ ಎಂದು ಅವರು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಮಾಜಿ ವಯನಾಡ್ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ನಂತರ ಲೋಕಸಭೆಯಿಂದ ಅನರ್ಹಗೊಂಡಿರುವುದರಿಂದ ಇದು ಕುಟುಂಬಕ್ಕೆ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com