ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಕುರಿತು ರಾಜ್ಯಾದ್ಯಂತ ಬಿಜೆಪಿಯಿಂದ ಜಾಗೃತಿ ಅಭಿಯಾನ!
ಮಂಗಳೂರು: ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಕರ್ನಾಟಕದಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 30ರವರೆಗೆ ರಾಜ್ಯದಾದ್ಯಂತ ಜಾಗೃತಿ ಜಾಥಾ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಏಳು ತಂಡಗಳನ್ನು ರಚಿಸಲಾಗಿದೆ. ಹಲವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕೇಂದ್ರ ಸರ್ಕಾರವು 2014 ರಿಂದ ವಿವಿಧ ಯೋಜನೆಗಳ ಅನುಷ್ಠಾನದ ಮೂಲಕ 'ಸುಧಾರಣೆಗಳು, ಕಾರ್ಯಕ್ಷಮತೆ ಮತ್ತು ಪರಿವರ್ತನೆ'ಯನ್ನು ತಂದಿದೆ. ಜಿಎಸ್‌ಟಿ ಮೂಲಕ ದಾಖಲೆಯ ತೆರಿಗೆ ಸಂಗ್ರಹವಾಗಿದೆ ಮತ್ತು ಈ ಅವಧಿಯಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 74 ರಿಂದ 141 ಕ್ಕೆ ಏರಿದೆ ಎಂದು ಅವರು ಹೇಳಿದರು.
ಈ ಅವಧಿಯಲ್ಲಿ 14 ಐಐಎಂಗಳು, 25 ಏಮ್ಸ್ ಆಸ್ಪತ್ರೆಗಳು, 225 ವೈದ್ಯಕೀಯ ಕಾಲೇಜುಗಳು ಮತ್ತು 390 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ ನಂತರದ ಭಾರತವು ಬಲಿಷ್ಠ ಆರ್ಥಿಕತೆಯಾಗಿ ಹೊರಹೊಮ್ಮಲು ಮುಂದೆ ಸಾಗಿದೆ ಎಂದು ಅವರು ಹೇಳಿದ್ದಾರೆ.
ಮೋದಿ ಸರ್ಕಾರದ ಸಾಧನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಮನೆ ಮನೆಗೆ ಪ್ರಚಾರ ನಡೆಸಲಾಗುವುದು ಎಂದು ಹೇಳಿದರು.
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಆರಗ ಜ್ಞಾನೇಂದ್ರ, ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ