ಪಕ್ಷ ವಿರೋಧಿ ಚಟುವಟಿಕೆ, ಮುಜುಗರದ ಹೇಳಿಕೆ: 11 ಮಂದಿಗೆ ಬಿಜೆಪಿಯಿಂದ ನೋಟಿಸ್ ಜಾರಿ!

ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಾಗೂ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಹನ್ನೊಂದು ಮಂದಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿದೆ. ಇನ್ನು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಾಗೂ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಹನ್ನೊಂದು ಮಂದಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿದೆ. ಇನ್ನು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ.

ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ವಿಚಾರಣೆ ನಡೆಸಿ ಶಿಸ್ತು ಕ್ರಮ ಜರುಗಿಸಲು ನಿರ್ಧರಿಸಲಾಗಿದೆ. ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆ ನೀಡುತ್ತಿರುವವರ ಜತೆ ಖುದ್ದು ಮಾತನಾಡಿದ್ದೇವೆ. ನೋಟಿಸ್ ಜಾರಿ ಮಾಡಲಾಗಿದ್ದು, ಮುಂದೆ ಇಂತಹ ಹೇಳಿಕೆ ನೀಡದಂತೆ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ಕಟೀಲ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿಗೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ಯಾರೂ ನೀಡಬಾರದು ಎಂದು ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಅಂತಹ ಹೇಳಿಕೆ ನೀಡಿದವರನ್ನು ಕರೆಸಿ ಮಾತನಾಡಿದ್ದೇವೆ. ಇಂತಹ ಪರಿಸ್ಥಿತಿ ಬರದಂತೆ ಎಚ್ಚರಿಕೆ ವಹಿಸಿ, ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಪಕ್ಷ ವಿರೋಧಿ ಹೇಳಿಕೆಗಾಗಿ ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರಿಗೆ ಕರ್ನಾಟಕ ಬಿಜೆಪಿ ನಿನ್ನೆ ನೋಟಿಸ್ ನೀಡಿತ್ತು. ಪಕ್ಷದ ರಾಜ್ಯ ಶಿಸ್ತು ಸಮಿತಿ ನೀಡಿರುವ ಶೋಕಾಸ್ ನೋಟಿಸ್‌ಗೆ ಲಿಖಿತ ಉತ್ತರ ನೀಡಲು ಒಂದು ವಾರ ಕಾಲಾವಕಾಶ ನೀಡಲಾಗಿದೆ. ಪಕ್ಷವು ರೇಣುಕಾಚಾರ್ಯ ಅವರಿಗೆ ನೀಡಿದ್ದ ನೋಟಿಸ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿತ್ತು. ಆದರೆ ಇತರರ ಬಗ್ಗೆ ಮಾಹಿತಿ ಇಲ್ಲ.

ವಿಧಾನಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಕಟೀಲು ರಾಜೀನಾಮೆ ನೀಡಬೇಕಿತ್ತು ಎಂದು ರೇಣುಕಾಚಾರ್ಯ ಹೇಳಿದ್ದರು. ಬಿಜೆಪಿ ಕಚೇರಿಯನ್ನು ಕಾರ್ಪೊರೇಟ್ ಕಚೇರಿಯನ್ನಾಗಿ ಮಾಡಲಾಗಿದೆ ಎಂದು ಆರೋಪಿಸಿರುವ ಮಾಜಿ ಸಚಿವರು ಯಾವುದೇ ಹೆಸರನ್ನು ಹೇಳದೆ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಪಕ್ಷವನ್ನು ಬಲಪಡಿಸಲು ಮತ್ತು ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಶ್ರಮಿಸಬೇಕು ಎಂದು ಒತ್ತಾಯಿಸಿದರು.

ವಿಧಾನಸಭೆಯ ಚುನಾವಣೆಯ ಸೋಲಿನ ನಂತರ ಹಲವಾರು ಬಿಜೆಪಿ ನಾಯಕರು ಇತ್ತೀಚೆಗೆ ತಮ್ಮ ಸಹೋದ್ಯೋಗಿಗಳನ್ನು ಟೀಕಿಸುತ್ತಿದ್ದಾರೆ. ಹೊಂದಾಣಿಕೆ ರಾಜಕಾರಣ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವಾಯಿತು ಎಂಬ ಹೇಳಿಕೆಗಳೊಂದಿಗೆ ಕಿಡಿಕಾರುತ್ತಿದ್ದಾರೆ. ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ ಟಿ ರವಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಆರೋಪ ಮಾಡಿದ್ದರು. ಇಬ್ಬರು ನಾಯಕರು ಯಾರ ಹೆಸರೆಳದಿದ್ದರೂ ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್ ಯಡಿಯೂರಪ್ಪ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದರು. 

ಇಂದು ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಕಾಂಗ್ರೆಸ್ ಸರಕಾರವು ನೀಡಿದ ಭರವಸೆಯಂತೆ ಚುನಾವಣಾ ಗ್ಯಾರಂಟಿಗಳನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜುಲೈ 4ರಂದು ವಿಧಾನಸೌಧದ ಒಳಗೆ ಮತ್ತು ಹೊರಗೆ ಇತರ ಮುಖಂಡರೊಂದಿಗೆ ಪ್ರತಿಭಟನೆಯ ನೇತೃತ್ವ ವಹಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಮನೆ ಮನೆಗೆ ತೆರಳಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಸಹಿ ಮಾಡಿದ ಗ್ಯಾರಂಟಿ ಕಾರ್ಡ್‌ಗಳನ್ನು ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com