
ಬೆಂಗಳೂರು: ವಿಧಾನಸಬಾ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ಆರಂಭಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಆದರೆ, ಅಮಾವಾಸ್ಯೆ ಹಿನ್ನೆಲೆಯಲ್ಲಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಿದೆ.
‘ಯುಗಾದಿ ಹಬ್ಬದ ದಿನದಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಪ್ರಕಟಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮಾತನಾಡಿ, ಅಮಾವಾಸ್ಯೆಯನ್ನು ಅಶುಭ ದಿನವೆಂದು ಪರಿಗಮಿಸಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯನ್ನು ಮುಂದೂಡಲಾಗಿತ್ತು ಎಂದು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಮಾತನಾಡಿ, ಸೋಮವಾರ ರಾಹುಲ್ ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡಿದ್ದರು. ಮಂಗಳವಾರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಯುಗಾದಿ ಹಬ್ಬದಂದು ಪಟ್ಟಿ ಬಿಡುಗಡೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೊದಲ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ಯಾವುದೇ ಅಡೆತಡೆಗಳು ಇಲ್ಲದಂತೆ ನಡೆಯಿತು. ಕೆಲವರ ಆಕ್ಷೇಪದ ಹೊರತಾಗಿಯೂ 20 ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ. 2ನೇ ಪಟ್ಟಿಗೂ ಆಕ್ಷೇಪಗಳು ಕೇಳಿ ಬಂದಿವೆ. ಇನ್ನು ಕೆಲವೇ ದಿನಗಳಲ್ಲಿ ಎರಡನೇ ಪಟ್ಟಿ ಕೂಡ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
Advertisement