ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಕ್ಸಮರ ಜೋರಾಗಿ ನಡೆಯುತ್ತಿದೆ. ಈ ಮಧ್ಯ ದ್ವೇಷಕಾರಿ, ಪ್ರಚೋದನಾಕಾರಿ, ವೈಯಕ್ತಿಕ ನಿಂದನಾತ್ಮಕ ಹೇಳಿಕೆಗಳ ಆರೋಪಗಳು ಕೇಳಿಬರುತ್ತಿದೆ.
ರಾಜ್ಯದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದ್ವೇಷಪೂರಿತ ಭಾಷಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇಂತಹ ಹೇಳಿಕೆಗಳ ಕುರಿತು ಸುಪ್ರೀಂಕೋರ್ಟ್ ನಿರ್ದೇಶನಗುಣವಾಗಿ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಅಜಯ್ ಮಾಕನ್, ವಿವೇಕ್ ಟಂಕಾ, ಸಲ್ಮಾನ್ ಖುರ್ಷಿದ್ ಮತ್ತು ಪವನ್ ಖೇರಾ ಅವರನ್ನೊಳಗೊಂಡ ಕಾಂಗ್ರೆಸ್ ನಾಯಕರ ನಿಯೋಗ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಇಂತಹ "ದ್ವೇಷಪೂರಿತ ಭಾಷಣಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಪತ್ರ ನೀಡಿತು.
ದ್ವೇಷಕಾರಿ ಭಾಷಣಗಳ ಕುರಿತು ಸುಪ್ರೀಂ ಕೋರ್ಟ್ ಆದೇಶದ ಪ್ರತಿಗಳನ್ನು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು, ದೇಶದ ಕಾನೂನು ಮತ್ತು ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಟಂಕಾ ಹೇಳಿದರು.
ರಾಜ್ಯದಲ್ಲಿ 'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳು ನಡೆಯುತ್ತವೆ' ಎಂದು ಬಿಜೆಪಿಯ ಮೂವರು ನಾಯಕರು ನೀಡುತ್ತಿರುವ ಹೇಳಿಕೆಗಳು ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
Advertisement