ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ನಾಳೆ ನಡೆಯಲಿರುವ ಮತ ಎಣಿಕೆಯಲ್ಲಿ ಪಕ್ಷ ಬಹುಮತ ಗಳಿಸಲಿದ್ದು, ಹೊಸ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ರಾಜ್ಯದ 6.5 ಕೋಟಿ ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾಳೆಯವರೆಗೂ, ಫಲಿತಾಂಶ ಹೊರಬೀಳುವವರೆಗೆ ಕಾಯೋಣ. ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ ಎಂದರು.
2018 ರಲ್ಲಿ ರಚನೆಯಾದ ಮೈತ್ರಿಯಂತೆಯೇ ಜೆಡಿಎಸ್ ಜೊತೆ ಸೇರಿ ಸರ್ಕಾರ ರಚಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ನಾಯಕ, ಅವರು ಎಲ್ಲಿ ಬೇಕಾದರೂ ಹೋಗಲಿ. ಕಾಂಗ್ರೆಸ್ ಬಹುಮತದೊಂದಿಗೆ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.
ಬಹುದಿನಗಳ ಪ್ರಚಾರದ ನಂತರ ಬಿಜೆಪಿ ಅಥವಾ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆಯದ ಸನ್ನಿವೇಶದಲ್ಲಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆಯ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಈ ನಡುವೆ ಸುರ್ಜೇವಾಲ ಇಂತಹ ಹೇಳಿಕೆ ನೀಡಿದ್ದಾರೆ.
Advertisement