ಬೆಂಗಳೂರು: ನಾಳೆ ನಡೆಯಲಿರುವ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ. ವಿವಿಧ ರಾಜ್ಯಗಳ ಹಲವು ಮುಖ್ಯಮಂತ್ರಿಗಳು ಮತ್ತು ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವೈಯಕ್ತಿಕವಾಗಿ ಆಹ್ವಾನಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಆಹ್ವಾನಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ.
ಆದಾಗ್ಯೂ, ತೆಲಂಗಾಣ ಮುಖ್ಯಮಂತ್ರಿ, ಕೆ ಚಂದ್ರಶೇಖರ್ ರಾವ್, ಒಡಿಶಾ ಮುಖ್ಯಮಂತ್ರಿ ಮತ್ತು ಬಿಜೆಡಿ ನಾಯಕ ನವೀನ್ ಪಟ್ನಾಯಕ್, ಆಂಧ್ರಪ್ರದೇಶ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ನಾಯಕ ವೈಎಸ್ ಜಗನ್ ಮೋಹನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಯಾವುದೇ ಆಹ್ವಾನ ಕಳುಹಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರಿಗೂ ಯಾವುದೇ ಆಹ್ವಾನವನ್ನು ಕಳುಹಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಖರ್ಗೆ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಆಹ್ವಾನ ಕಳುಹಿಸಿದ್ದು, ಅವರು ಪ್ರಮಾಣ ವಚನದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಈ ಮಧ್ಯೆ ಬಿಹಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ನಂತರ ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಂಪರ್ಕದಲ್ಲಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ವಿಪಕ್ಷಗಳು ಒಂದುಗೂಡುವುದಾದರೆ ಬರುವುದಾಗಿ ಅವರಿಗೆ ಹೇಳಿದ್ದೇನೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದರು.
Advertisement