ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಸಲೀಂ ಅಹ್ಮದ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಬುಧವಾರ ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಬುಧವಾರ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ 20 ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಎಲ್ಲಾ ಜಿಲ್ಲೆಗಳಿಗೂ ಸಚಿವರನ್ನು ನಿಯೋಜಿಸಲಾಗಿದೆ. ಲೋಕಸಭೆ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಕುರಿತು ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಸಚಿವರು ಮತ್ತು ವೀಕ್ಷಕರಿಗೆ ಕೆಪಿಸಿಸಿ ಸೂಚನೆ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಚರ್ಚೆ ನಡೆಸಿ ಹೈಕಮಾಂಡ್‌ಗೆ ವರದಿ ಸಲ್ಲಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಜನವರಿ ಎರಡನೇ ವಾರದಲ್ಲಿ ಘೋಷಿಸಲಾಗುವುದು ಎಂದು ತಿಳಿಸಿದರು.

ನಮ್ಮ ಸರ್ಕಾರ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶಈರ್ವಾದ ಮಾಡುವ ವಿಶ್ವಾಸವಿದೆ. ನಮ್ಮ ಪಕ್ಷ ಕನಿಷ್ಠ 20 ಸೀಟುಗಳನ್ನು ರಾಜ್ಯದಲ್ಲಿ ಗೆದ್ದು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ 17,900 ಕೋಟಿ ಹಣವನ್ನು ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಇದುವರೆಗೂ ಕೇಂದ್ರದಿಂದ ಸ್ಪಂದನೆ ಸಿಗದಿರುವುದು ದುದೈವ. ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಹಾಗೂ 5 ಜನ ಕೇಂದ್ರ ಸಚಿವರಿದ್ದು ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ರಾಜ್ಯದವರೇ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡದೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದರು.

ನವೆಂಬರ್ 9ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ಅವರು ಧ್ವಜಾರೋಹಣ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಚಿವರುಗಳು ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಲೀಂ ಅಹ್ಮದ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com