ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು: ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೊದಲ ಹೆಜ್ಜೆ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಿಸುವ ಮೂಲಕ ಕಳೆದ ಆರು ತಿಂಗಳಿನಿಂದ ಪಕ್ಷದಲ್ಲಿದ್ದ ಗೊಂದಲ, ಕುತೂಹಲಕ್ಕೆ ತೆರೆಬಿದ್ದಿದೆ. ಈ ಮೂಲಕ ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ.
ಬೂತ್ ಮಟ್ಟದ ಅಧ್ಯಕ್ಷ ಶಶಿಧರ್ ಮನೆಗೆ ಭೇಟಿ ನೀಡಿ ಬಿ ವೈ ವಿಜಯೇಂದ್ರ ಸಿಹಿ ತಿನ್ನಿಸಿ ಸಂಭ್ರಮಪಟ್ಟರು
ಬೂತ್ ಮಟ್ಟದ ಅಧ್ಯಕ್ಷ ಶಶಿಧರ್ ಮನೆಗೆ ಭೇಟಿ ನೀಡಿ ಬಿ ವೈ ವಿಜಯೇಂದ್ರ ಸಿಹಿ ತಿನ್ನಿಸಿ ಸಂಭ್ರಮಪಟ್ಟರು
Updated on

ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಿಸುವ ಮೂಲಕ ಕಳೆದ ಆರು ತಿಂಗಳಿನಿಂದ ಪಕ್ಷದಲ್ಲಿದ್ದ ಗೊಂದಲ, ಕುತೂಹಲಕ್ಕೆ ತೆರೆಬಿದ್ದಿದೆ. ಈ ಮೂಲಕ ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ.

ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಂತರ ಅವರು ಇಂದು ಶನಿವಾರ ಬೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ನೀಡುವ ಮೂಲಕ ಸಂಘಟನೆಯಲ್ಲಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಈ ಮೂಲಕ ಕಾರ್ಯಕರ್ತರಿದ್ದರೆ ಪಕ್ಷ, ಕಾರ್ಯಕರ್ತರಿಂದಲೇ ಪಕ್ಷ ಬೆಳೆಯುವುದು ಎಂಬ ಸಂದೇಶವನ್ನು ರವಾನೆ ಮಾಡುವ ಪ್ರಯತ್ನ ಮಾಡಿದ್ದಾರೆ.

ಶನಿವಾರ ಬೆಳಗ್ಗೆ ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ಕುಮಾರ ಕೃಪಾ ಬೂತ್ ನಂಬರ್ 40 ರ ಅಧ್ಯಕ್ಷರಾದ ಶಶಿಧರ್ ಎಂಬುವವರ ಮನೆಗೆ ಭೇಟಿ ನೀಡಿದರು. ಪಕ್ಷದ ಬೂತ್ ಮಟ್ಟದ ಸಂಘಟನೆಯ ಬಗ್ಗೆ ಅವರ ಬಳಿ ಚರ್ಚೆ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಹಿನ್ನೆಲೆ ಬೆಂಗಳೂರಿನಲ್ಲಿ ಸಂಸದ ಪಿ.ಸಿ. ಮೋಹನ್ ಪ್ರತಿಕ್ರಿಯೆ ನೀಡಿ, ವಿಜಯೇಂದ್ರ‌ ಪಕ್ಷದಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರ ಆಸೆಗಳು ಸಹಜ. ಹಾಗಂತ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ವಿಜಯೇಂದ್ರ‌ಗಿದೆ ಎಂದರು.

ಕೇಶವ ಕೃಪಾಕ್ಕೆ ಭೇಟಿ: ಬೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ಕೊಟ್ಟ ಬೆನ್ನಲ್ಲೇ ಆರ್‌ಎಸ್‌ಎಸ್ ಕೇಂದ್ರ ಕಚೇರಿಗೂ ವಿಜಯೇಂದ್ರ ಭೇಟಿ ನೀಡುತ್ತಿದ್ದಾರೆ. ಚಾಮರಾಜಪೇಟೆಯಲ್ಲಿರುವ ಆರ್‌ಎಸ್‌ಎಸ್ ಕೇಂದ್ರ ಕಚೇರಿ ಕೇಶವಕೃಪಕ್ಕೆ ವಿಜಯೇಂದ್ರ ಭೇಟಿ ನೀಡಿ ಸಂಘದ ಪ್ರಮುಖರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.

ಈ ವೇಳೆ ರಾಜ್ಯದಲ್ಲಿ ಬಿಜೆಪಿ ಸಂಘಟನೆಯ ವಿಚಾರವಾಗಿ ಸಂಘದ ಪ್ರಮುಖರು ವಿಜಯೇಂದ್ರ ಅವರಿಗೆ ಕೆಲವೊಂದು ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ. ಈ ಮೂಲಕ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡ ಮೊದಲ ದಿನವೇ ಫುಲ್ ಸಕ್ರಿಯವಾಗಿದ್ದಾರೆ.

ಶಿವಮೊಗ್ಗದಲ್ಲಿ ಸಂಭ್ರಮ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದೆ. ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪಟಾಕಿ‌ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಹೆಗಲ‌‌ ಮೇಲೆ ಹೊತ್ತು‌ ಕುಣಿದು ಕುಪ್ಪಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com