ಗ್ಯಾರಂಟಿ ಜಾರಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಕೆ.ಶಿವಕುಮಾರ್ ತಿರುಗೇಟು

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ? ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ" ಎಂದೂ ಪ್ರಶ್ನಿಸಿದರು.

ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ ಎಂದು ಹೇಳಿದರು.

ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳ ಫಲಾನುಭವಿಯೂ ಅಲ್ಲ, ಯೋಜನೆಗಳ ಬಗ್ಗೆ ಅವರಿಗೆ ಯಾವುದೇ ಕಲ್ಪನೆಯೂ ಇಲ್ಲ. ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳು ಅವರಿಗೆ ತಲುಪಿವೆಯೇ ಅಥವಾ ಇಲ್ಲವೇ ಎಂದು ತಿಳಿಯಲು ಅವರು ತಮ್ಮ ಕ್ಷೇತ್ರದ  ಮತದಾರರನ್ನು ಕೇಳಲಿ ಎಂದು ತಿರುಗೇಟು ನೀಡಿದರು.

ಚನ್ನಪಟ್ಟಣದ 25 ಕ್ಕೂ ಹೆಚ್ಚು ಮತದಾರರ ಬಳಿ ನಾನೇ ಖುದ್ದಾಗಿ ಮಾತನಾಡಿದ್ದೇನೆ. ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದ ಮತದಾರರ ಬಳಿ ಹೋಗಿ ಕೇಳಲಿ. ಉಚಿತ ವಿದ್ಯುತ್, ಶಕ್ತಿ, ಅನ್ನ ಭಾಗ್ಯ, ಗೃಹಲಕ್ಷ್ಮೀ ಯೋಜನೆಗಳು ಅವರಿಗೆ ತಲುಪಿದೆಯೆ? ಇಲ್ಲವೇ? ಎಂದು ಪರೀಕ್ಷೆ ಮಾಡಲಿ. ಒಂದಷ್ಟು ತಾಂತ್ರಿಕ ದೋಷ ಹಾಗೂ ಇತರೇ ಕಾರಣಗಳಿಂದ ಶೇ 5 ರಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಈಗ ಒಂದೊಂದೇ ಸಮಸ್ಯೆಗಳನ್ನು ಬಗೆಹರಿಸಿ ತಲುಪಿಸಲಾಗುತ್ತಿದೆ.

ನಾನು ತೆಲಂಗಾಣದ 5 ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದೆ. ಆ ಐದೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಡಿ. 9 ರಂದು ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಸರ್ಕಾರ ರಚಿಸಲಿದ್ದು, ಕರ್ನಾಟಕದ ಮಾದರಿಯಂತೆ 6 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಈ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕದ ಸಚಿವರಿಗೆ ಪಂಚರಾಜ್ಯ ಚುನಾವಣೆ ಸಲುವಾಗಿ ಕಮಿಷನ್ ಟಾರ್ಗೆಟ್ ಕೊಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, "ಕುಮಾರಸ್ವಾಮಿ ಅವರು ಟಾರ್ಗೆಟ್ ಕೊಟ್ಟಿರಬೇಕು. ನಮ್ಮ ಸಚಿವರು ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಹೋಗಿ ಬರುತ್ತಿದ್ದಾರೆ. ತಾಳ್ಮೆಯಿಂದ ಇರಲು ಕುಮಾರಸ್ವಾಮಿ ಅವರಿಗೆ ಆಗುತ್ತಿಲ್ಲ. ಅವರಿಗೂ ವಿಜಯೇಂದ್ರ ಇಬ್ಬರಿಗೂ ಒಳ್ಳೆಯದಾಗಲಿ" ಎಂದರು.

ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಕೊಟ್ಟಿರುವ ನೋಟಿಸ್ ಪೀರಿಯಡ್‌ನಲ್ಲಿ ಇದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಕುಮಾರಸ್ವಾಮಿ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದ್ದಾರೆ. ನಾವೆಲ್ಲ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ಬೇರೆ ಚರ್ಚೆಯೇ ಇಲ್ಲ" ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com