ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಸಿಎಂ ಸಿದ್ದರಾಮಯ್ಯ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದರು.
ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ.
ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ.
Updated on

ಮೈಸೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಿಎಂ, ಜನರ ತೀರ್ಪು ಕಾಂಗ್ರೆಸ್ ಪರವಾಗಲಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಆದರೆ, ಜನಾದೇಶ ಕಾಂಗ್ರೆಸ್ ಪರವಾಗಿದ್ದರೆ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಯನ್ನು ಮುಂದೂಡಲಿದೆ ಎಂಬ ವರದಿಗಳು ಸತ್ಯವಾಗಲು ಸಾಧ್ಯವಿಲ್ಲ. ಏಕೆಂದರೆ ಈಗಾಗಲೇ ನವೆಂಬರ್ ಕೊನೆಯಲ್ಲಿದ್ದೇವೆ, ಚುನಾವಣಾ ನೀತಿ ಸಂಹಿತೆ ಮಾರ್ಚ್ ಅಂತ್ಯಕ್ಕೆ ಆಗಬಹುದು ಎಂಬ ನಿರೀಕ್ಷೆಯಿದೆ” ಎಂದು ಹೇಳಿದರು.

ಜನವರಿ 22ರಂದು ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು, ಇದರಿಂದ ಬಿಜೆಪಿಗೆ ರಾಜಕೀಯ ಲಾಭವಾಗಲ್ಲ. ವಿವಾದ ಬಹಳ ವರ್ಷಗಳಿಂದ ಇದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ. ಅದರಿಂದ ಮತದಾರರು ಬದಲಾಗುತ್ತಾರೆ ಎನ್ನುವುದು ಸುಳ್ಳು. ನಮ್ಮ ದೇಶದ ಜನ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡುಕೊಂಡಿದ್ದಾರೆ.

ಬ್ರಿಟಿಷರ ಹಾಗೂ ಮೊಘಲರ ದಾಳಿಯಾದರೂ ಒಂದು ದೇಶವಾಗಿ ನಾವು ಉಳಿದುಕೊಂಡಿದ್ದೇವೆ. ಈ ದೇಶದಲ್ಲಿ ಅನೇಕ ಜಾತಿ, ಭಾಷೆಗಳು ಹಾಗೂ ಧರ್ಮಗಳಿದ್ದರೂ ದೇಶವಾಗಿ ಒಂದಾಗಿರುವುದು ಜನರ ನಡುವಿನ ಐಕ್ಯತೆ, ಒಗ್ಗಟ್ಟಿನಿಂದ. ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟವರು ದೇಶದಲ್ಲಿ ಹೆಚ್ಚಿದ್ದಾರೆ” ಎಂದು ತಿಳಿಸಿದರು.

ಬೇರೆ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ನಾಯಕರು ಕರ್ನಾಟಕವನ್ನು ಟೀಕೆ ಮಾಡುತ್ತಿದ್ದಾರೆ. ಅದಕ್ಕೆ ಅವರು ಮಧ್ಯಪ್ರದೇಶದಲ್ಲಿ ನನ್ನ ಹಾಗೂ ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಮಂತ್ರಿಗಳು ನಮ್ಮ ಗ್ಯಾರಂಟಿಗಳಿಗೆ ವಿರೋಧ ಮಾಡಿದ್ದರು. ಈಗ ‘ವಿಕಸಿತ್ ಭಾರತ್’ ಎಂದು ವ್ಯಾನ್ ಕಳಿಸಿ, ಅದರಲ್ಲಿ ಪಿಎಂ ಗ್ಯಾರಂಟಿ ಎಂದು ಬರೆದಿದ್ದಾರೆ. ಅದನ್ನು ಭಾರತದ ಸರ್ಕಾರ ಕಳುಹಿಸಿದೆ. ಮೊದಲು ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿ ಈಗ ಅವರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಇದನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?” ಎಂದು ಟೀಕಿಸಿದರು.

ಇದೇ ವೇಳೆ ತಮ್ಮ ಮತ್ತು ತಮ್ಮ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳು ರಾಜಕೀಯ ಪ್ರೇರಿತವಾದದ್ದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com