ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅದೃಷ್ಟ ಯಾರಿಗೆ?

ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ.
ಬೆಳಗಾವಿ ರಾಜಕೀಯದ ಶಕ್ತಿ ಕೇಂದ್ರಗಳಾದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ
ಬೆಳಗಾವಿ ರಾಜಕೀಯದ ಶಕ್ತಿ ಕೇಂದ್ರಗಳಾದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ.

ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಸ್ಥಾನಗಳಲ್ಲಿ ಬಿಜೆಪಿ ಕೇವಲ 7 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ, ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದಿದೆ. ರಾಜ್ಯಾದ್ಯಂತ ಮತ್ತು ಬೆಳಗಾವಿಯಲ್ಲಿ ಕಾಂಗ್ರೆಸ್ ಜನಪ್ರಿಯತೆಯನ್ನು ಗಳಿಸುತ್ತಿರುವ ರೀತಿಯನ್ನು ನೋಡಿದರೆ, 2024ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆಗಳು ನಿಚ್ಛಳವಾಗಿದೆ ಎನ್ನಬಹುದು. 

ಮೂಲಗಳ ಪ್ರಕಾರ, ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಅನುಭವಿ ಮತ್ತು ಜನಪ್ರಿಯ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ಉತ್ಸುಕವಾಗಿದೆ, ಆದರೆ ರಾಜ್ಯ ನಾಯಕತ್ವದ ಒಂದು ವಿಭಾಗವು ಬೆಳಗಾವಿ ಮತ್ತು ಚಿಕ್ಕೋಡಿಯಿಂದ ಲಿಂಗಾಯತ ಮತ್ತು ಕುರುಬ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸೂಚಿಸಿದೆ.

ವಿನಯ್ ನಾವಲಗಟ್ಟಿ, ಕಿರಣ್ ಸಾಧುನವರ್, ಅಮರಸಿಂಗ್ ಪಾಟೀಲ್ ಸೇರಿದಂತೆ ಹಲವು ಅಭ್ಯರ್ಥಿಗಳು ಈಗಾಗಲೇ ಬೆಳಗಾವಿ ಸ್ಥಾನಕ್ಕೆ ಪಕ್ಷದ ಟಿಕೆಟ್‌ಗಾಗಿ ಲಾಬಿ ಆರಂಭಿಸಿದ್ದಾರೆ. ಹೈಕಮಾಂಡ್ ಸತೀಶ್ ಜಾರಕಿಹೊಳಿ ಅಥವಾ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ನಿರ್ಧರಿಸಬಹುದು ಎಂದು ಮೂಲಗಳು ತಿಳಿಸಿವೆ. 

ಬೆಳಗಾವಿಯಿಂದ ಲಿಂಗಾಯತ ಹಾಗೂ ಚಿಕ್ಕೋಡಿಯಿಂದ ಕುರುಬ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳುತ್ತಿದ್ದರೆ, ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಳೆದ ನಾಲ್ಕು ಲೋಕಸಭಾ ಚುನಾವಣೆಗಳಲ್ಲಿ ಬೆಳಗಾವಿಯಿಂದ ಗೆದ್ದಿರುವ ಬಿಜೆಪಿಯಿಂದ ಬೆಳಗಾವಿ ಕ್ಷೇತ್ರವನ್ನು ಕಸಿದುಕೊಳ್ಳಲು ಜಾರಕಿಹೊಳಿಯವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಕಾಂಗ್ರೆಸ್ ನಾಯಕತ್ವ ಉತ್ಸುಕವಾಗಿದೆ ಎಂದು ಹೇಳಲಾಗುತ್ತಿದೆ. 

ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಟಿಕೆಟ್ ಆಕಾಂಕ್ಷಿಗಳಲ್ಲ ಎಂದು ಹೇಳಿದ್ದರೂ, ಜಾರಕಿಹೊಳಿ ಅವರು ಈಗಾಗಲೇ ಪ್ರಿಯಾಂಕಾ ಅವರನ್ನು ಮುಂಬರುವ ದೊಡ್ಡ ಕದನಕ್ಕೆ ತಯಾರಿ ನಡೆಸುತ್ತಿದ್ದಾರೆ ಮತ್ತು ಸೀಟು ಗೆಲ್ಲುವ ವಿಶ್ವಾಸ ಹೊಂದಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಕಳೆದ 10 ವರ್ಷಗಳಿಂದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವಿನಯ್ ನಾವಲಗಟ್ಟಿ ಅವರು ಬೆಳಗಾವಿಯಲ್ಲಿ 30 ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರಣ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಗೊಂದಲದಲ್ಲಿದ್ದು, ಬಿಜೆಪಿ, ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಚಿಕ್ಕೋಡಿಯಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿ ಲಕ್ಷ್ಮಣರಾವ್ ಚಿಂಗಳೆ, ಚಿದಾನಂದ ಸವದಿ, ಪ್ರಕಾಶ ಹುಕ್ಕೇರಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ.

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ನಾಯಕ ಮತ್ತು ಮಾಜಿ ಸಂಸದ ರಮೇಶ್ ಕತ್ತಿ ಪಕ್ಷವನ್ನು ಬದಲಾಯಿಸಿದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ ಪರಿಗಣಿಸಬಹುದು ಎಂದು ಮೂಲಗಳು ಹೇಳುತ್ತವೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆ ಮಾತನಾಡಿದ ಕತ್ತಿ, ತಾನು ಈಗಾಗಲೇ ಚಿಕ್ಕೋಡಿಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಆದರೆ, ಈವರೆಗೆ ಕಾಂಗ್ರೆಸ್ ಪಕ್ಷದ ಯಾರೊಬ್ಬರೂ ತಮ್ಮನ್ನು ಸಂಪರ್ಕಿಸಿಲ್ಲ ಎಂದಿದ್ದಾರೆ. ಆದರೆ ಬಿಜೆಪಿ ಪಕ್ಷ ಟಿಕೆಟ್ ನಿರಾಕರಿಸಿದರೆ ಕತ್ತಿ ಅವರು ಕಾಂಗ್ರೆಸ್ ಸೇರಬಹುದು ಎಂದು ಮೂಲಗಳು ತಿಳಿಸಿವೆ.

ಗ್ಯಾರಂಟಿ ಯೋಜನೆಗಳು: ವಿಧಾನಸಭೆ ಚುನಾವಣೆಯ ಪ್ರಚಾರದ ಭಾಗವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಆರಂಭಿಸಿದ ಐದು ಖಾತರಿ ಯೋಜನೆಗಳು ಅಧಿಕಾರಕ್ಕೆ ಬಂದ ನಂತರ ಭಾರೀ ಜನಪ್ರಿಯತೆಯನ್ನು ಗಳಿಸಿವೆ. ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ 11 ಶಾಸಕರ ಬೆಂಬಲವನ್ನು ಹೊಂದಿರುವ ಕಾಂಗ್ರೆಸ್ ತನ್ನ ಐದು ಜನಪ್ರಿಯ ಯೋಜನೆಗಳ ಮೂಲಕ ತನ್ನ ಸ್ಥಾನವನ್ನು ಹೆಚ್ಚಿಸಿಕೊಂಡಿದೆ. ಬಿಜೆಪಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸುತ್ತದೆಯೇ ಅಥವಾ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪುಟಿದೇಳುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com