ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಮತ್ತೆ ಆದೇಶ: ಸಂವಿಧಾನದ ಆಶಯಕ್ಕೆ ವಿರುದ್ಧ ಎಂದ ಕುಮಾರಸ್ವಾಮಿ

ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಈ ಆದೇಶ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಬುಧವಾರ ಹೇಳಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಈ ಆದೇಶ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಬುಧವಾರ ಹೇಳಿದ್ದಾರೆ.

ಈ ಆದೇಶವನ್ನು ಧಿಕ್ಕರಿಸುವ ಧೈರ್ಯ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಿಡಿ ಕಾರಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲದೆ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದು ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದಿದ್ದಾರೆ.

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇದೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com