ವೆಸ್ಟೆಂಡ್‌ನಲ್ಲಿ ಕೂತು ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ?

ವೆಸ್ಟೆಂಡ್‌ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಟಾಂಗ್ ನೀಡಿದ್ದಾರೆ. ಇದೀಗ ಕುಮಾರಸ್ವಾಮಿ ಅವರು ಮತ್ತೆ ಸಿಎಂ ವಿರುದ್ಧ ಕಿಡಿಕಾರಿದ್ದಾರೆ. 
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ವೆಸ್ಟೆಂಡ್‌ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಟಾಂಗ್ ನೀಡಿದ್ದಾರೆ. ಇದೀಗ ಕುಮಾರಸ್ವಾಮಿ ಅವರು ಮತ್ತೆ ಸಿಎಂ ವಿರುದ್ಧ ಕಿಡಿಕಾರಿದ್ದಾರೆ. 

ವೆಸ್ಟೆಂಡ್‌ನಲ್ಲಿ ಕೂತು ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ?. 5 ವರ್ಷ ಸರ್ಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಬಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರ್ಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ; ಒಂದು ವೆಸ್ಟೆಂಡ್‌, ಮತ್ತೊಂದು ಬಿಜೆಪಿ ಬಿ ಟೀಂ ಎನ್ನುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದೀರ್ಘ ಟ್ವೀಟ್ ಮಾಡಿರುವ ಅವರು, ಡೋಂಗಿ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟೆಂಡ್ ಸೋಂಕು ಮತ್ತೆ ತಗುಲಿದೆ. I.N.D.I.A. ಮೈತ್ರಿಕೂಟದ ಸಭೆಯನ್ನು ಇದೇ ವೆಸ್ಟೆಂಡ್ ಬದಲಿಗೆ, ತಮ್ಮ ಸುತ್ತ ತಲೆ ಎತ್ತಿರುವ ʼಪರ್ಸಂಟೇಜ್ ಪಟಾಲಂʼನ ಏಳುಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಕ್ರಿಕೆಟ್ ನೋಡುವಷ್ಟು ಶೋಕಿದಾರ

ಆಧುನಿಕ ಭಾರತದ ಈಸ್ಟ್‌ ಇಂಡಿಯಾ ಕಂಪನಿಯಾದ ಕಾಂಗ್ರೆಸ್‌ಗೆ ಕರ್ನಾಟಕವೇ ಪೊಗದಸ್ತು ಹುಲ್ಲುಗಾವಲು. ಸಿದ್ದಪುರುಷ ಮತ್ತು ಶೋಕಿ ಪುರುಷನೇ ಈ ಹುಲ್ಲುಗಾವಲಿನ ಮೇಟಿ. ರಾಜ್ಯದಲ್ಲಿ ವಿದ್ಯುತ್ ಕೊರತೆ ಮತ್ತು ಬರದಿಂದ ಜನರು ಬೇಯುತ್ತಿದ್ದರೆ, ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ. ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ, ನೀರೋ ಪಿಟೀಲು ಬಾರಿಸುತ್ತಿದ್ದ!! ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್‌ ಮ್ಯಾಚ್‌ ನೋಡುತ್ತಿದ್ದ!!! ಎಂದು ಟೀಕಿಸಿದ್ದಾರೆ.

5 ತಿಂಗಳಿಂದ ವಿದ್ಯುತ್ ಉತ್ಪಾದನೆಯನ್ನು ನಿರ್ಲಕ್ಷ್ಯಿಸಿದ್ದೇಕೆ? ಹಾಹಾಕಾರ ಎದ್ದ ಮೇಲೆ ಅದು ಮಾಡಿದ್ದೇವೆ, ಇದು ಮಾಡಿದ್ದೇವೆ ಎಂದರೆ ಲೋಡ್ ಶೆಡ್ಡಿಂಗ್ ಏಕೆ ಬಂತು? 2013-2018ರಲ್ಲಿ 12,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಿದ್ದೇವೆ ಎಂದು ನೀವೇ ಹೇಳಿದ್ದೀರಿ. ಈಗ ಮಳೆ ಕಡಿಮೆಯಾಗಿ ಜಲವಿದ್ಯುತ್‌ ಉತ್ಪಾದನೆ ಕುಸಿದಿದೆ. ಇದು ನನಗೂ ಗೊತ್ತಿದೆ. ಅದರಲ್ಲಿ 3,000 ಮೆಗಾ ವ್ಯಾಟ್ ಇಲ್ಲ ಎಂದರೂ ಸಾರ್ವಜನಿಕ ಮತ್ತು ಖಾಸಗಿ ವಲಯ ಸೇರಿ ಒಟ್ಟು 29,000 ಮೆಗಾ ವ್ಯಾಟ್ ವಿದ್ಯುತ್‌ ಉತ್ಪಾದನೆ ಆಗಲೇಬೇಕಿತ್ತು. ಆಗಿಲ್ಲವೇಕೆ?. ಏಕಾಎಕಿ ವಿದ್ಯುತ್ ಉತ್ಪಾದನೆಯನ್ನು ನಿಲ್ಲಿಸಿದ್ದೇಕೆ? ಜಲವಿದ್ಯುತ್‌ ಕೈಕೊಡುತ್ತದೆ ಎಂದು ಗೊತ್ತಿದ್ದರೂ, ಕಲ್ಲಿದ್ದಲಿನ ಸಂಗ್ರಹ ಇಟ್ಟುಕೊಳ್ಳಲಿಲ್ಲವಲ್ಲ, ಏಕೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸತ್ಯ ಹೇಳಿದರೆ ಸಚಿವರನ್ನು ಛೂ ಬಿಡುತ್ತಿದ್ದೀರಿ

ಜಲ ವಿದ್ಯುತ್‌ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್‌ ಉತ್ಪಾದನೆಗೂ ಖೋತಾ ಬೀಳುವುದಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ʼಕೈ ಚಳಕʼವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ....... ಗಳಂತೆ ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ಈ ನೆಪಗಳ ನಾಜೂಕತನ?. ಮತ್ತೆ ಮತ್ತೆ ನಾನು ಹೇಳುತ್ತೇನೆ. ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್‌ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮಿಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್‌ ಕ್ಷಾಮದ ವಾಸ್ತವತೆ ಬಗ್ಗೆ 'ಶ್ವೇತಪತ್ರ' ಹೊರಡಿಸಿ. ಈ ಬಗ್ಗೆ ನಿಮ್ಮ ಮೌನ ಏಕೆ? ಎಂದು ಸವಾಲೆಸೆದಿದ್ದಾರೆ.

ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ ನಂತರ ಇಂ'ಧನ' ಇಲಾಖೆಯಲ್ಲೂ ನೀವು ನಗದೀಕರಣಕ್ಕೆ ನಾಂದಿ ಹಾಡಿದ್ದೀರಿ. ಖರೀದಿ ಖುಷಿಯಲ್ಲಿ ಪರ್ಸಂಟೇಜ್ ಪಟಾಲಂ ಸಂಭ್ರಮಿಸುತ್ತಿದೆ ಎಂದು ಕುಮಾರಸ್ವಾಮಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com