ಬಿಜೆಪಿ ಸಭೆಗೆ ಚಕ್ಕರ್; ಚಲುವರಾಯಸ್ವಾಮಿ ಭೇಟಿಗೆ ಹಾಜರ್: ಸೋಮಶೇಖರ್ ಹಾದಿಯಲ್ಲಿ ರೇಣುಕಾಚಾರ್ಯ?

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸ್ವಪಕ್ಷದ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಶಾಸಕ ರೇಣುಕಾಚಾರ್ಯ ಅವರು ಬೆಂಗಳೂರಿನಲ್ಲಿ ಇದ್ದರೂ ಸಹ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಸಭೆಗೆ ಗೈರು ಹಾಜರಿ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ರೇಣುಕಾಚಾರ್ಯ
ರೇಣುಕಾಚಾರ್ಯ

ಬೆಂಗಳೂರು: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸ್ವಪಕ್ಷದ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಶಾಸಕ ರೇಣುಕಾಚಾರ್ಯ ಅವರು ಬೆಂಗಳೂರಿನಲ್ಲಿ ಇದ್ದರೂ ಸಹ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಸಭೆಗೆ ಗೈರು ಹಾಜರಿ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಪ್ತರಾದ, ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಗುರುವಾರ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಎನ್ ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿರುವುದು ರೇಣುಕಾಚಾರ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ (ಪಿಸಿಬಿ) ಸುದ್ದಿಗಾರರೊಂದಿಗೆ ನಿಗದಿತ ಸಂವಾದದಲ್ಲಿ ಚಲುವರಾಯಸ್ವಾಮಿ ನಿರತರಾಗಿದ್ದರು, ಆದರೆ ಅವರನ್ನು ಭೇಟಿ ಮಾಡಲು ರೇಣುಕಾಚಾರ್ಯ ಒಂದು ಗಂಟೆಗೂ ಹೆಚ್ಚು ಕಾಲ ಕಾದರು. ನಂತರ ಇಬ್ಬರೂ ಖಾಸಗಿಯಾಗಿ ಕೆಲಕಾಲ ಚರ್ಚೆ ನಡೆಸಿದರು. ಆದರೆ ತಾವು ಹಲವಾರು ವರ್ಷಗಳಿಂದ ಸ್ನೇಹಿತರಾಗಿದ್ದೇವೆ, ಆಪರೇಷನ್ ಹಸ್ತಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಒಂದು ವಾರದ ಹಿಂದೆ ರೇಣುಕಾಚಾರ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿ ಮಾಡಿ ಹೊನ್ನಾಳಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿದ್ದರು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ರೇಣುಕಾಚಾರ್ಯ ತಾವು ದಾವಣಗೆರೆ ಲೋಕಸಭೆ ಟಿಕೆಟ್‌ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ.

ಯಡಿಯೂರಪ್ಪ ಮತ್ತು ಪುತ್ರ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ನಾಯಕರು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಮಾತನಾಡಿದ್ದಕ್ಕಾಗಿ ರೇಣುಕಾಚಾರ್ಯ ಅವರಿಗೆ ಇತ್ತೀಚೆಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಗುರುವಾರ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರು ಕರೆದಿದ್ದ ಸಭೆಗೂ ಅವರು ಗೈರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com