ಬಿಜೆಪಿ- ಜೆಡಿಎಸ್ ಮೈತ್ರಿ: ಸಿಎಂ ಸಿದ್ದರಾಮಯ್ಯ, ಎಂಬಿ ಪಾಟೀಲ್ ಹೇಳಿದ್ದು ಹೀಗೆ...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಕುರಿತು ಉಭಯ ಪಕ್ಷಗಳ ಮುಖಂಡರ ನಡುವೆ ಮಾತುಕತೆ ನಡೆದಿದೆ ಎಂಬ ವರದಿಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿವೆ.
ಸಿಎಂ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್ ಸಾಂದರ್ಭಿಕ ಚಿತ್ರ
ಸಿಎಂ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್ ಸಾಂದರ್ಭಿಕ ಚಿತ್ರ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಕುರಿತು ಉಭಯ ಪಕ್ಷಗಳ ಮುಖಂಡರ ನಡುವೆ ಮಾತುಕತೆ ನಡೆದಿದೆ ಎಂಬ ವರದಿಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿವೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆ ಮುಂದಿನ ಚುನಾವಣೆಯಲ್ಲಿ ಹೊಡೆತ ಕೊಡಲು ನಿರ್ಧರಿಸಿರುವ ಜೆಡಿಎಸ್ ವರಿಷ್ಠ ದೇವೇಗೌಡರು, ಈಗಾಗಲೇ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. 

ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದರು. 

ಮತ್ತೊಂದೆಡೆ ಪ್ರತಿಕ್ರಿಯಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ  ಸಚಿವ ಎಂ.ಬಿ. ಪಾಟೀಲ್, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಏನಾದರೂ ಮಾಡಿಕೊಳ್ಳಲಿ. ಇದರಿಂದ ಸೆಕ್ಯುಲರ್ ಎನ್ನುವ ಹೆಸರು ಇಟ್ಟುಕೊಂಡಿರುವ ಜೆಡಿಎಸ್ ಬಣ್ಣವೂ ಬಯಲಾಗಲಿದೆ. ನಾವು ಏಕಾಂಗಿಯಾಗಿ ರಾಜ್ಯದಲ್ಲಿ ಕನಿಷ್ಠಪಕ್ಷ 20 ಸ್ಥಾನಗಳನ್ನಾದರೂ ಗೆಲ್ಲಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಮುಗಿದು ಐದಾರು ತಿಂಗಳಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಜನರಿಂದ ತಿರಸ್ಕೃತವಾಗಿರುವ ಆ ಪಕ್ಷವು ಈಗಾಗಲೇ ಮುಳುಗಿ ಹೋಗಿರುವ ಹಡಗು. ಸಂಪೂರ್ಣ ಹತಾಶ ಸ್ಥಿತಿ ತಲುಪಿರುವ ಪಕ್ಷಕ್ಕೆ ಯಾವ ಭವಿಷ್ಯವೂ ಇಲ್ಲ. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಾಲಿಯಾಗುತ್ತಿದ್ದಾರೆ. ಕಾಂಗ್ರೆಸ್ ಸರಕಾರವು ಕೇವಲ ನೂರು ದಿನಗಳಲ್ಲಿ ಮಾಡಿರುವ ಸಾಧನೆ ಕಂಡು ಪ್ರಧಾನಿ ಮೋದಿ ಕೂಡ ನಿರುತ್ತರರಾಗಿದ್ದಾರೆ ಎಂದರು.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಆ ಪಕ್ಷದ 25 ಸಂಸದರು ರಾಜ್ಯಕ್ಕೆ ನ್ಯಾಯ ಕೊಡಿಸಬೇಕು. ಆದರೆ ಅವರೆಲ್ಲ ಮೋದಿಯವರಿಗೆ ಹೆದರಿಕೊಂಡು ತುಟಿ ಬಿಚ್ಚುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಆರ್ ಎಸ್ ಗೆ ಭೇಟಿ‌ ನೀಡುತ್ತಿರುವುದರ ಹಿಂದೆ ರಾಜಕೀಯ ಪ್ರಚಾರ ಪಡೆಯುವ ಉದ್ದೇಶವಿದೆ. ಸ್ವತಃ ನೀರಾವರಿ ಸಚಿವರೂ ಆಗಿದ್ದ ಅವರು ಹೀಗೆ ನಡೆದುಕೊಳ್ಳುತ್ತಿರುವುದು ಅನುಚಿತ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com